ಮನೆ ಬಾಗಿಲಿಗೆ ಸರ್ಕಾರಿ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
Government schemes at the doorstep: Minister Satish Jarkiholi
ಲೋಕದರ್ಶನ ವರದಿ
ಯರಗಟ್ಟಿ 19: ಸರ್ಕಾರದ ಯೋಜನೆಗಳ ಸೌಲಭ್ಯಗಳನ್ನು ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಿಸುವ ಹಾಗೂ ಸಾರ್ವಜನಿಕರ ಅಹವಾಲುಗಳನ್ನು ಸ್ಥಳದಲ್ಲಿಯೇ ಆಲಿಸಿ ಪರಿಹರಿಸುವ ಉದ್ದೇಶದಿಂದ ‘ಪ್ರಜಾ ಸೇವಾ ಆಂದೋಲನ’ ಹಮ್ಮಿಕೊಳ್ಳಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಪಟ್ಟಣದ ಶ್ರೀಶೈಲ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಯರಗಟ್ಟಿ ಹಾಗೂ ಸವದತ್ತಿ ತಾಲೂಕುಗಳ ಪ್ರಜಾ ಸೇವಾ ಆಂದೋಲನ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಂಡ ಹಿನ್ನೆಲೆಯಲ್ಲಿ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಪ್ರಜಾ ಸೇವಾ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಆಂದೋಲನ ನಡೆಸಲಾಗುವುದು ಎಂದರು. ಸರ್ಕಾರದ ಪ್ರತಿಯೊಂದು ಯೋಜನೆಯ ಪ್ರಯೋಜನವನ್ನು ಗ್ರಾಮೀಣ ಭಾಗದ ಪ್ರತಿಯೊಂದು ಮನೆಗೂ ತಲುಪಿಸುವುದು ಹಾಗೂ ಸಾರ್ವಜನಿಕರ ಅಹವಾಲುಗಳನ್ನು ಗುಣಾತ್ಮಕವಾಗಿ ಪರಿಹರಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಅಧಿಕಾರಿಗಳು ಅರ್ಜಿಗಳನ್ನು ಸ್ವೀಕರಿಸುವುದಕ್ಕೆ ಸೀಮಿತವಾಗದೆ, ಕಾನೂನುಬದ್ಧವಾಗಿ ಸಾಧ್ಯವಿರುವ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಬೇಕು ಎಂದು ಸೂಚಿಸಿದರು.
ಶಾಸಕ ವಿಶ್ವಾಸ ವೈದ್ಯ ಮಾತನಾಡಿ, ಸರ್ಕಾರದ ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಉದ್ದೇಶದಿಂದ ಪ್ರಜಾ ಸೇವಾ ಆಂದೋಲನ ಆಯೋಜಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರ ಹಲವು ವರ್ಷಗಳ ಸಮಸ್ಯೆಗಳಿಗೆ ತ್ವರಿತ ಪರಿಹಾರ ದೊರೆಯುವ ನೀರೀಕ್ಷೆಯಿದೆ ಎಂದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಲಾಯಿತು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 