ಸ್ವಚ್ಛತಾ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳು ತಲುಪಲಿ: ಮುರಳಿ ಅಶೋಕ್ ಸಾಲಪ್ಪ
Government schemes should reach sanitation workers: Murali Ashok Salappa
ಹಾವೇರಿ 18: ಸ್ವಚ್ಛತಾ ಕಾರ್ಮಿಕರ ಮಕ್ಕಳ ಶಿಕ್ಷಣ, ಸ್ವಯಂ ಉದ್ಯೋಗ, ಕೌಶಲ್ಯಾಭಿವೃದ್ಧಿ, ವಸತಿ, ಸಾಲ ಸೌಲಭ್ಯ ಸೇರಿದಂತೆ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಅಶೋಕ್ ಸಾಲಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪೌರ ಹಾಗೂ ಸ್ವಚ್ಛತಾ ಕಾರ್ಮಿಕರ ಕಲ್ಯಾಣ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಪ್ರಗತಿ ಪರೀಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸ್ವಚ್ಛತಾ ಕಾರ್ಮಿಕರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಎಲ್ಲಾ ಸೌಲಭ್ಯಗಳು ಸಮರ್ಕವಾಗಿ ತಲುಪುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.
ಸ್ವಚ್ಛತಾ ಕಾರ್ಮಿಕರ ಕುಟುಂಬದ ಸದಸ್ಯರಿಗೆ ಸ್ವಾವಲಂಬನೆ ಕಲ್ಪಿಸುವ ನಿಟ್ಟಿನಲ್ಲಿ ವಿಶೇಷ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದ್ದು, ಮೊದಲ ಹಂತದಲ್ಲಿ ಆಯ್ಕೆಯಾದ ಐದು ಕುಟುಂಬಗಳಿಗೆ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಆರಂಭಿಸಲು ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದರು.
ಮ್ಯಾನ್ಯುವಲ್ ಸ್ಕ್ಯಾವೆಂಜರ್ ಕುಟುಂಬಗಳಿಗೆ ಸರ್ಕಾರದ ಶಿಕ್ಷಣ, ಸ್ವಯಂ ಉದ್ಯೋಗ, ಕೌಶಲ್ಯಾಭಿವೃದ್ಧಿ ಹಾಗೂ ಪುನರ್ವಸತಿ ಯೋಜನೆಗಳಲ್ಲಿ ಮೊದಲ ಆದ್ಯತೆ ನೀಡಬೇಕು. ಅವರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕೆ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಎಂದು ಹೇಳಿದರು.
ಕೆಲವು ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತಾ ಕಾರ್ಮಿಕರಿಗೆ ವೇತನ ಪಾವತಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ದೂರುಗಳು ಬಂದಿರುವುದಾಗಿ ಉಲ್ಲೇಖಿಸಿದ ಅವರು, ಬಾಕಿ ವೇತನವನ್ನು ತಕ್ಷಣ ಪಾವತಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆ ಸಂಸ್ಥೆಗಳಿಗೆ ಸೂಚನೆ ನೀಡಬೇಕು ಎಂದರು. ಕಾರ್ಮಿಕರ ಹಕ್ಕುಗಳಿಗೆ ಯಾವುದೇ ಧಕ್ಕೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.
ಸ್ವಚ್ಛತಾ ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ವಿಶೇಷ ಕಲಿಕಾ ಕೇಂದ್ರಗಳನ್ನು ಆರಂಭಿಸುವ ಯೋಜನೆಯೂ ರೂಪಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಆಸಕ್ತಿ ಹೆಚ್ಚಿಸಿ, ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ.ಬಿ. ಮಂಜುನಾಥ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ಪುನೀತ್, ನಗರಸಭೆ ಆಯುಕ್ತ ಕಾಂತರಾಜು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪ್ರಶಾಂತ್ ವರಗಪ್ಪನವರ, ನಿಗಮದ ಜಿಲ್ಲಾ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ 