ಬೆಂಗಳೂರು, ಏ.27,ಲಾಕ್ ಡೌನ್ ತೆಗೆದ ತಕ್ಷಣವೇ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಮರಳಲಾರದು. ಜಿಡಿಪಿ ಬೆಳವಣಿಗೆ ಈ ಹಿಂದೆ ಇದ್ದ ಸ್ಥಿತಿಗೆ ಮರಳಲು ವರ್ಷಗಳೇ ಬೇಕಾಗಬಹುದೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.ಅನೇಕ ಖಾಸಗಿ ಕಂಪನಿಗಳು ಈಗಾಗಲೇ ಸಿಬ್ಬಂದಿ ಕಡಿತ ಮತ್ತು ಸಂಬಳ ಕಡಿತ ಮಾಡುವ ತೀರ್ಮಾನ ತೆಗೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ. ಹೀಗಾಗಿ ಸರಕಾರ ಜನಕಲ್ಯಾಣ ಯೋಜನೆಗಳ ಮೇಲೆ ಹೆಚ್ಚು ಖರ್ಚು ಮಾಡಬೇಕಾಗುವುದರಿಂದ ಕುಬೇರ ಉದ್ಯೋಗಪತಿಗಳಿಂದ ಕೊರೋನ ತೆರಿಗೆಯನ್ನು ಸಂಗ್ರಹಿಸಲಿ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ರಿಸರ್ವ್ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿರುವಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ ಎಂದು ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.ಮುಂಬರುವ ದಿನಗಳಲ್ಲಿ 'ಕಾಸ್ಟ್ ಆಫ್ ಲಿವಿಂಗ್' ಕಡಿಮೆ ಮಾಡುವುದು ಸರ್ಕಾರಗಳ ಆದ್ಯತೆ ಆಗಲಿದೆ. ಈ ಹಠಾತ್ ಶಾಕ್ ನಿಂದ ಜನಸಾಮಾನ್ಯರು ಸುಧಾರಿಸಿಕೊಳ್ಳಲು ಅನುವಾಗುವಂತೆ ಬಾಡಿಗೆ ಮುಂದೂಡಿಕೆ ಬದಲಾಗಿ ಭಾಗಶಃ ಬಾಡಿಗೆ ವಿನಾಯಿತಿ, ಖಾಸಗಿ ಶಾಲೆ ಕಾಲೇಜುಗಳ ಶುಲ್ಕ ಕಡಿತ, ವಿದ್ಯುತ್ ಬಿಲ್ ಕಡಿತ, ಪೆಟ್ರೋಲ್,ಡೀಸೆಲ್ ದರ ಕಡಿತ ಘೋಷಣೆ ಮಾಡುವುದು ಸೂಕ್ತ ಎಂದಿದ್ದಾರೆ.