ಲೋಕದರ್ಶನ ವರದಿ
ಮಹನೀಯರ ಜಯಂತಿ ಅದ್ದೂರಿ ಆಚರಣೆ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ 18: ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನ ರಾಂ ಮತ್ತು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಈ ಇಬ್ಬರು ಮಹನೀಯರ ಜಯಂತೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಡಾ.ಬಾಬು ಜಗಜೀವನ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವ ಕಾರ್ಯಕ್ರಮ ಆಚರಿಸುವ ಕುರಿತು ನಗರದ ಜಿಲ್ಲಾ ಪಂಚಾಯತ್ ನ ನೂತನ ನಜೀರ್ ಸಾಬ್ ಸಭಾಂಗಣದಲ್ಲಿ ಮಂಗಳವಾರ ಏರಿ್ಡಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನ ರಾಂ ಅವರ 118 ನೇ ಜಯಂತೋತ್ಸವ ಕಾರ್ಯಕ್ರಮವನ್ನು ಏ.05 ರಂದು ಮತ್ತು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತೋತ್ಸವ ಕಾರ್ಯಕ್ರಮವನ್ನು ಏ.14 ರಂದು ಅದ್ದೂರಿಯಾಗಿ ಆಚರಿಸಲು ಇದಕ್ಕೆ ಬೇಕಾದ ಸಕಲ-ಸಿದ್ಧತೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಳೆದ ಎರಡು ವರ್ಷಗಳಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ವಿಜೃಂಭಣೆಯಿಂದ ಆಚರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು. ಆಯಾ ಸಮಿತಿಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಜಯಂತಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಶಿಷ್ಠಾಚಾರನ್ವಯ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಎಲ್ಲಾ ಗಣ್ಯರಿಗೆ ಆಹ್ವಾನಿಸಬೇಕು. ಮಹನೀಯರ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸಲು ತಜ್ಞರಿಂದ ವಿಶೇಷ ಉಪನ್ಯಾಸ ಆಯೋಜಿಸಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ವೇದಿಕೆ ಕಾರ್ಯಕ್ರಮದಲ್ಲಿ ಅಭಿನಂದಿಸಲು ಸನ್ಮಾನ ಕಾರ್ಯಕ್ರಮ ಆಯೋಜಿಸಬೇಕು ಎಂದು ತಿಳಿಸಿದ ಅವರು, ಜಯಂತಿ ಕಾರ್ಯಕ್ರಮಗಳಂದು ನಡೆಯುವ ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಸಹಕಾರದಲ್ಲಿ ಸ್ತಬ್ಧಚಿತ್ರಗಳನ್ನು ರೂಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಡಾ.ಬಾಬು ಜಗನ್ ಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಮಾತನಾಡಿ, ಡಾ.ಬಾಬು ಜಗನ್‌ಜೀವನ್‌ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ನಾವೆಲ್ಲರೂ ಆಳವಡಿಸಿಕೊಳ್ಳುವ ಮೂಲಕ ಎಲ್ಲರೂ ಸಂಘಟಿತರಾಗಿ ಜಯಂತಿ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲರೂ ತಪ್ಪದೇ ಭಾಗವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು ಮಾತನಾಡಿ, ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪರಿಣಾಮಕಾರಿಯಾಗಿ, ಅಚ್ಚುಕಟ್ಟಾಗಿ ಆಯೋಜಿಸುವಂತೆ ನಿರ್ದೇಶನ ನೀಡಲಾಗುವುದು ಎಂದು ಸಭೆಗೆ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ಮಾತನಾಡಿ, ಮಹನೀಯರ ಜಯಂತಿ ಅಂಗವಾಗಿ ನಗರದಲ್ಲಿ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಮತ್ತು ಕಲಾವಿದರ ತಂಡಗಳನ್ನೊಳಗೊಂಡು ಅದ್ದೂರಿ ಮೆರವಣಿಗೆ ಆಯೋಜಿಸಲಾಗುವುದು ಎಂದರು.
*ಡಾ.ಬಾಬು ಜಗನ್‌ಜೀವನ್ ರಾಂ ಜಯಂತಿ:*
ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನ ರಾಂ ಅವರ ಜಯಂತಿ ಕಾರ್ಯಕ್ರಮವನ್ನು ಏ.05 ರಂದು ಮಧ್ಯಾಹ್ನ 01 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಏರಿ್ಡಸಲಾಗುವುದು. ಅಂದು ಬೆಳಿಗ್ಗೆ 10 ಗಂಟೆಗೆ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ಬ್ರೂಸ್ ಪೇಟೆ ಪೊಲೀಸ್ ಠಾಣೆ ಮುಂಭಾಗ-ಜೈನ್ ಮಾರ್ಕೆಟ್ ರಸ್ತೆ-ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ನಡೆಯಲಿದೆ.
*ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ:*
ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಏ.14 ರಂದು ಸಂಜೆ 06 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗುವುದು. ಅಂದು ಸಂಜೆ 04 ಗಂಟೆಗೆ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡು ಹೆಚ್.ಆರ್.ಗವಿಯಪ್ಪ ವೃತ್ತ-ಜೈನ್ ಮಾರ್ಕೆಟ್ ರಸ್ತೆ-ಬ್ರೂಸ್‌ಪೇಟೆ ಪೊಲೀಸ್ ಠಾಣೆ ಮುಂಭಾಗ-ಬೆಂಗಳೂರು ರಸ್ತೆ-ಗಡಿಗಿ ಚೆನ್ನಪ್ಪ ವೃತ್ತದ ಮಾರ್ಗವಾಗಿ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದ ವರೆಗೆ ನಡೆಯಲಿದೆ.
ಮೆರವಣಿಗೆಯಲ್ಲಿ ಎಲ್ಲಾ ಸಂಘ-ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಾರ್ವಜನಿಕರು ಒಳಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಮುಖಂಡರು ಮಾತನಾಡಿ, ನಗರದ ನಲ್ಲಚೇರುವು ಪ್ರದೇಶದಲ್ಲಿರುವ ಡಾ.ಬಾಬು ಜಗನ್ ಜೀವನ್ ರಾಮ್ ಭವನದ ಮೇಲ್ಛಾವಣಿ ತಗಡಿನ ಶೀಟ್ ನಿಂದ ಕೂಡಿದ್ದು, ಸೂಕ್ತವಾಗಿರದ ಕಾರಣ ಕೂಡಲೇ ಬದಲಾಯಿಸಿ ಸಿಮೆಂಟ್ ನಿಂದ ಮೇಲ್ಛಾವಣಿ ನಿರ್ಮಿಸಬೇಕು. ಅದರಂತೆ ನಗರದ ಮೊದಲನೇ ಗೇಟ್ ಬಳಿಯಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದ ದುರಸ್ತಿ ಕಾರ್ಯವು ವೇಗ ನೀಡಬೇಕು ಎಂದು ಸಭೆಗೆ ತಿಳಿಸಿದರು.
ಮಹನೀಯರ ಜಯಂತಿಯ ಕಾರ್ಯಕ್ರಮ ಗ್ರಾಮಮಟ್ಟದಲ್ಲಿ ಸರಿಯಾಗಿ ಆಯೋಜಿಸುತ್ತಿಲ್ಲ. ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಯುವ ಸಮುದಾಯ ಮತ್ತು ಮಕ್ಕಳಿಗೆ ತಲುಪಿಸುವ ವಿಚಾರ ಸಂಕಿರಣದಂತಹ ಕಾರ್ಯಕ್ರಮ ಆಯೋಜಿಸಿ ಮಾಹಿತಿ ತಲುಪಿಸುವ ಕೆಲಸವಾಗಬೇಕು ಎಂದು ಸಭೆಗೆ ಪ್ರಸ್ತಾಪಿಸಿದರು.
ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನ ರಾಂ ಮತ್ತು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವ ಕಾರ್ಯಕ್ರಮಗಳ ಅಂಗವಾಗಿ ಶಾಲಾ-ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಬೇಕು ಎಂದು ಮಂಡಿಸಿದರು.
ನಗರದ ಪ್ರಮುಖ ವೃತ್ತಗಳಲ್ಲಿ ಒಂದನ್ನು ಗುರುತಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪನೆಗೆ ಕ್ರಮವಹಿಸಬೇಕು. ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಡಾ.ಬಾಬು ಜಗನ್ ಜೀವನ್ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಸಭೆಗೆ ಮುಖಂಡರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಆಹಾರ ಇಲಾಖೆಯ ಉಪನಿರ್ದೇಶಕಿ ಸಕೀನಾ ಸೇರಿದಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.