ಮಹಾರಾಷ್ಟ್ರದಲ್ಲಿ ಹೆಚ್ಚಿನ ಕೋವಿಡ್ 19 - ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆತಂಕ

ಬೆಂಗಳೂರು, ಏ 19,ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭಾರೀ ಆತಂಕ ವ್ಯಕ್ತವಾಗಿದೆ. ಹೀಗಾಗಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದ್ದು, ಅಗತ್ಯ ವಸ್ತುಗಳು ಹೊರತುಪಡಿಸಿ ಉಳಿದ ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶ ನೀಡುತ್ತಿಲ್ಲ. ಗಡಿ ಭಾಗ ಅಥಣಿ ತಾಲೂಕಿನಲ್ಲಿ ಜಲ ಸಂಪನನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕೋವಿಡ್-೧೯ ಕಾರ್ಯಪಡೆ ಸಭೆ ನಡೆಸಿ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು.

ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಗಡಿ ಭಾಗದಲ್ಲಿ ಸೋಂಕು ಹರಡದಂತೆ ವ್ಯಾಪಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು. ಇಂತಹ ಸಂದರ್ಭದಲ್ಲಿ ಹೊರಗಿನಿಂದ ಬಂದವರ ಮೇಲೆ ನಿಗಾ ಇಡುವುದು ಅಗತ್ಯವಿದೆ. ಆದರೆ, ಅಥಣಿಯಲ್ಲಿ ಯಾವುದೇ ಸೋಂಕು ಪ್ರಕರಣಗಳು ದೃಢಪಟ್ಟಿಲ್ಲ ಎಂಬುದು ಸಮಾಧಾನಕರ ಸಂಗತಿ ಎಂದರು.ಈಗಿನ ಪರಿಸ್ಥಿತಿಯಲ್ಲಿ ಉದಾಸೀನ ಮಾಡುವುದು ಬೇಡ, ಬೆಳಗಾವಿ ಮತ್ತು ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ದಿನೇ ದಿನೇ ಅಧಿಕವಾಗುತ್ತಿದ್ದು ಈ ಹಿನ್ನಲೆಯಲ್ಲಿ ಎಚ್ಚರಿಕೆಯಿಂದಿರಬೇಕು. ಸಾಮಾಜಿಕ ಅಂತರ ಕಾಪಾಡಲು ಆದ್ಯತೆ ನೀಡುವ ಜತಗೆ ಮನೆಯಲ್ಲಿಯೇ ಇದ್ದು, ಲಾಕ್‌ಡೌನ್ ನಿಯಮಗಳನ್ನು ಜನತೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಮೇಲುಸ್ತುವಾರಿ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಆದೇಶಿಸಲಾಗಿದೆ.