ಬೆಂಗಳೂರು, ಫೆ 27, 78 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಶುಭ ಹಾರೈಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರನ್ನು 'ಕಠಿಣ ಪರಿಶ್ರಮ'ದ ಮುಖ್ಯಮಂತ್ರಿ ಎಂದು ಶ್ಲಾಘಿಸಿರುವ ಮೋದಿ, ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ದೇವರು ಕರುಣಿಸಲಿ ಎಂದು ಹಾರೈಸಿದ್ದಾರೆ. ‘ಕರ್ನಾಟಕದ ಕಠಿಣ ಪರಿಶ್ರಮದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಜೀ ಅವರಿಗೆ ಜನ್ಮದಿನದ ಶುಭಾಶಯಗಳು. ರಾಜ್ಯದ ಪ್ರಗತಿಗೆ, ವಿಶೇಷವಾಗಿ ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ಉತ್ಸಾಹದಿಂದ ಅವರು ಕೆಲಸ ಮಾಡುತ್ತಿದ್ದಾರೆ. ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ.’ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ ರಾಜ್ಯದ ಹಲವು ನಾಯಕರು ಮತ್ತು ಗಣ್ಯರು ಬೆಂಗಳೂರಿನ ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಅವರಿಗೆ ಶುಭ ಕೋರಿದರು. ಇಂದು ಸಂಜೆ ನಗರದ ಅರಮನೆ ಮೈದಾನದಲ್ಲಿ ಜನ್ಮದಿನದ ಅಂಗವಾಗಿ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಲ್ಲದೆ, ಕಾಂಗ್ರೆಸ್ ನ ಸಿದ್ದರಾಮಯ್ಯ ಮತ್ತು ಜೆಡಿಎಸ್ ನ ಎಚ್.ಡಿ.ಕುಮಾರಸ್ವಾಮಿ ಸಮಾರಂಭದಲ್ಲಿ ಹಾಜರಾಗಲಿದ್ದಾರೆ. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಪ್ರಲ್ಹಾದ್ ಜೋಶಿ ಮತ್ತು ಸುರೇಶ್ ಅಂಗಡಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.