ನವದೆಹಲಿ, ಅ 24: ಹರಿಯಾಣದಲ್ಲಿ ರಾಜಕೀಯ ಲೆಕ್ಕಾಚಾರಗಳು ಕ್ಷಣಕ್ಷಣಕ್ಕೂ ಏರುಪೇರಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಅವರಿಗೆ ದೆಹಲಿಗೆ ಬರುವಂತೆ ಬಿಜೆಪಿ ನಾಯಕರು ಬುಲಾವ್ ನೀಡಿದ್ದಾರೆ.
ಹರಿಯಾಣದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸೂಚನೆಯ ಹಿನ್ನೆಲೆಯಲ್ಲಿ ಮತ್ತು ಮುಂದೆ ಕೈಗೊಳ್ಳಬೇಕಾದ ರಾಜಕೀಯ ನಿರ್ಧಾರಗಳ ಬಗ್ಗೆ ಚರ್ಚೆ ಮತ್ತು ತಂತ್ರಗಾರಿಕೆ ರೂಪಿಸಲು ಬಿಜೆಪಿ ಹೈಕಮಾಂಡ್ ಮುಂದಾಗಿದ್ದು ಕಟ್ಟರ್ ಅವರನ್ನು ದೆಹಲಿಗೆ ಕರೆಸಿಕೊಂಡಿದೆ.
ಈ ನಡುವೆ ಜನನಾಯಕ ಜನತಾಪಾರ್ಟಿಯ ದುಷ್ಯಂತ್ ಚೌಟಾಲಾ ಅವರಿಗೆ ಬೇಡಿಕೆ ಹೆಚ್ಚಾಗುತ್ತಿದ್ದು ಸರ್ಕಾರ ರಚನೆಯ ಹಪಹಪಿಗೆ ಬಿದ್ದಿರುವ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಚೌಟಾಲಾ ಅವರ ನಿರಂತರ ಸಂಪರ್ಕದಲ್ಲಿವೆ.
ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದರೆ ದುಷ್ಯಂತ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಕಾಂಗ್ರೆಸ್ ಆಹ್ವಾನ ಕೊಟ್ಟಿದೆ. ಸರ್ಕಾರ ರಚನೆ ಕುರಿತು ಮಾಜಿ ಮುಖ್ಯಮಂತ್ರಿ ಭೂಪೇಂದರ್ ಹೂಡಾ ಮತ್ತು ಸೋನಿಯಾ ಗಾಂಧಿ ಮಾತುಕತೆ ನಡೆಸಿದ್ದಾರೆ. ಹೇಗಾದರೂ ಮಾಡಿ ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುವಂತೆ ನೋಡಿಕೊಳ್ಳಬೇಕೆಂದು ಸೋನಿಯಾ ಗಾಂಧಿ ಅವರು ಮಾಜಿ ಮುಖ್ಯಮಂತ್ರಿ ಹೂಡಾ ಅವರಿಗೆ ಸೂಚನೆ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಈ ನಡುವೆ ಮುಖ್ಯಮಂತ್ರಿ ಹುದ್ದೆಯನ್ನು ಯಾವ ಪಕ್ಷ ನೀಡುತ್ತದೋ ಅವರಿಗೆ ಬೆಂಬಲ ನೀಡುವುದಾಗಿ ದುಷ್ಯಂತ್ ಚೌಟಾಲಾ ಹೇಳಿಕೊಂಡಿದ್ದಾರೆ.