ಬೆಂಗಳೂರು, ಜೂ 13,ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ವಿಮಾನ ಮತ್ತು ರೈಲುಗಳಲ್ಲಿ ಆಗಮಿಸುವ ಪ್ರಯಾಣಿಕರು ಆರೋಗ್ಯ ಸೇತು ಮೊಬೈಲ್ ಆ್ಯಪ್ ಅಳವಡಿಸಿಕೊಳ್ಳುವುದು ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.ಅನಿವರ್ ಎ. ಅರವಿಂದ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಈ ಮಾಹಿತಿ ನೀಡಿತು. ಆ್ಯಪ್ ಬಳಕೆಗೆ ಸಂಬಂಧಿಸಿದಂತೆ ವಿಮಾನ ಮತ್ತು ರೈಲು ಪ್ರಯಾಣಿಕರು ಸ್ವಯಂ ದೃಢೀಕರಣ ಮೂಲಕ ಪ್ರಯಾಣಿಸಬಹುದು. ಆರೋಗ್ಯ ಸೇತು ಮೊಬೈಲ್ ಆ್ಯಪ್ ಅಳವಡಿಕೆ ಕೇವಲ ಐಚ್ಛಿಕ ಎಂದು ಕೇಂದ್ರ ಸರ್ಕಾರದ ಪರ ವಕೀಲರು ಮಾಹಿತಿ ನೀಡಿದರು.ಈ ಮಾಹಿತಿಯನ್ನು ಪುರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.