ಅಡರಕಟ್ಟಿ ಗ್ರಾ.ಪಂ. ಕಾರ್ಯದರ್ಶಿ ಶರಣಪ್ಪ ಡಂಬಳ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

ಅಡರಕಟ್ಟಿ ಗ್ರಾ.ಪಂ. ಕಾರ್ಯದರ್ಶಿ ಶರಣಪ್ಪ ಡಂಬಳ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ Heartfelt farewell to Adarakatti Gram Panchayat Secretary Sharanappa Dambala

 ಲಕ್ಷ್ಮೇಶ್ವರ, ಜು.08: ತಾಲೂಕಿನ ಅಡರಕಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಶರಣಪ್ಪ ಡಂಬಳ ಅವರು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ, ಸದಸ್ಯರು ಹಾಗೂ ಗ್ರಾಮಸ್ಥರು ಭಾವಪೂರ್ಣವಾಗಿ ಸನ್ಮಾನಿಸಿ ಬೀಳ್ಕೊಟ್ಟರು.  

ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಹಾಗೂ ಗ್ರಾಮದ ಹಿರಿಯ ಮುಖಂಡ ನಿಂಗಪ್ಪ ಪಾಟೀಲ್, ಶರಣಪ್ಪ ಡಂಬಳ ಅವರು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿ ಗ್ರಾಮಾಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಪ್ರಶಂಸಿಸಿದರು.  

ಅವರ ಸೇವಾ ಅವಧಿಯಲ್ಲಿ ಹೊಸ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ವಿಶೇಷ ಕೊಡುಗೆ ನೀಡಿದ್ದು, ಅಧಿಕಾರಿಗಳು, ಸಿಬ್ಬಂದಿ ಮತ್ತು ಸದಸ್ಯರೊಂದಿಗೆ ಸಮನ್ವಯ ಸಾಧಿಸಿ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ ಎಂದು ಹೇಳಿದರು.  

ನಿವೃತ್ತಿಯ ನಂತರದ ಜೀವನ ಸುಖ, ಆರೋಗ್ಯ ಮತ್ತು ನೆಮ್ಮದಿಯಿಂದ ಕೂಡಿರಲಿ ಎಂದು ಶುಭ ಹಾರೈಸಿದರು.  ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿಯ ಕೃಷ್ಣಪ್ಪ ಧರ್ಮರ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.