ಭಾರಿ ಮಳೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್

ಮಂಗಳೂರು, ಅ 24:     ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಎಡಬಿಡದೆ ಮಳೆ ಸುರಿಯುತ್ತಿರುವ ಕಾರಣ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ. ಮೂರು ದಿನಗಳ ಕಾಲ ಕರ್ನಾಟಕದ ಮೂರು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು ರೆಡ್ ಅಲರ್ಟ್ ಘೋಷಿಸಿದ್ದಾರೆ.  ಅಕ್ಟೋಬರ್ 18ರಿಂದ ನಿರಂತರ ಮಳೆ ಸುರಿಯುತ್ತಿದೆ.  ಆದಾಗ್ಯೂ, ಯಾವುದೇ ಸಾವು ನೋವು ಸಂಭವಿಸಿಲ್ಲ.  ಸುಮಾರು 42 ಮನೆಗಳು ಹಾನಿಗೊಳಗಾಗಿವೆ.  ಮನೆಗಳು ಸಂಪೂರ್ಣವಾಗಿ ಕುಸಿದ ಕುಟುಂಬಗಳಿಗೆ 5 ಲಕ್ಷ ರೂ. ಮತ್ತು ಮನೆಗಳು ಭಾಗಶಃ ಹಾನಿಗೊಳಗಾದ ಕುಟುಂಬಗಳಿಗೆ 50,000 ರೂ. ಪರಿಹಾರ ಪ್ರಕಟಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಶಿವಮೊಗ್ಗದ ವರದಿಯ ಪ್ರಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ರಾಜ್ ಕೆ ಎಸ್ ಈಶ್ವರಪ್ಪ ಅವರು ಗುರುವಾರ ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ಪರಿಶೀಲನಾ ಸಭೆ ನಡೆಸಿದರು. ಪರಿಹಾರ ಕಾರ್ಯಗಳಿಗೆ ಹಣದ ಕೊರತೆಯಿಲ್ಲ.  ಹೀಗಾಗಿ ಸಮಯ ವ್ಯರ್ಥ ಮಾಡದೆ ಸಂತ್ರಸ್ತರ ನೆರವಿಗೆ ಧಾವಿಸಿ ಎಂದು ಈಶ್ವರಪ್ಪ  ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ, ಉನ್ನತ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.