ಬೆಂಗಳೂರು, ಆ 11 ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ರಾಜ್ಯಕ್ಕೆ ಆಗಮಿಸುತ್ತಿದ್ದು, ನೆರೆ ಬಾಧಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ರಾಜ್ಯದ 17 ಜಿಲ್ಲೆಗಳ 80 ತಾಲೂಕುಗಳಲ್ಲಿ ಅತಿವೃಷ್ಟಿಯಿಂದ ಜನ ಸಂಕಷ್ಟಕ್ಕೆ ಸಿಲುಕಿ ಜನ- ಜಾನುವಾರು ಸಾವು ನೋವು ಉಂಟಾಗಿದೆ. ಇದರ ಜತೆಗೆ ಅಪಾರ ಪ್ರಮಾಣದಲ್ಲಿ ಆಸ್ತಿಪಾಸ್ತಿ ನಷ್ಟ ಉಂಟಾಗಿದೆ. ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮಧ್ಯಾಹ್ನ 2.30ಕ್ಕೆ ಅಮಿತ್ ಶಾ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ನಂತರ 2.45ಕ್ಕೆ ವಾಯುಪಡೆಯ ಹೆಲಿಕಾಪ್ಟರ್ನಲ್ಲಿ ಸುಮಾರು 1.45 ಗಂಟೆ ಕಾಲ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಸಂಜೆ 4.30ಕ್ಕೆ ಸಾಂಬ್ರಾ ವಿಮಾನನಿಲ್ದಾಣದ ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ವೈಮಾನಿಕ ಸಮೀಕ್ಷೆ ಹಾಗೂ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತಮ್ಮ ದಕ್ಷಿಣ ಕನ್ನಡ ಜಿಲ್ಲಾ ಭೇಟಿಯನ್ನು ರದ್ದುಪಡಿಸಿದ್ದಾರೆ. ರಾಜ್ಯದಲ್ಲಿ ಅತಿವೃಷ್ಟಿಯಿಂದ ಭಾರೀ ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು, ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಜತೆಗೆ ರಸ್ತೆ, ಸೇತುವೆ ಸೇರಿದಂತೆ ಮೂಲ ಸೌಕರ್ಯ ಅಭಿವೃದ್ಧಿಗೆ ದೊಡ್ಡ ಮೊತ್ತದ ಹಣದ ಅಗತ್ಯವಿದೆ. ಹಾಗಾಗಿ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯವಿದೆ. ಇನ್ನೊಂದೆಡೆ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂಬ ಆಗ್ರಹವೂ ಇದೆ. ಹಣಕಾಸು ನೆರವಿನ ಬೇಡಿಕೆಯನ್ನು ಮುಖ್ಯಮಂತ್ರಿ ಅವರು ಗೃಹ ಸಚಿವರಿಗೆ ಸಲ್ಲಿಸಲಿದ್ದಾರೆ. ಅಮಿತ್ ಶಾ ಅವರು ಕೇಂದ್ರ ಗೃಹ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರವಾಹಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ವೇಳೆಯಲ್ಲೇ ಸಂಪುಟ ವಿಸ್ತರಣೆ ಬಗ್ಗೆ ಯಡಿಯೂರಪ್ಪ ಅವರೊಂದಿಗೆ ಅನೌಪಚಾರಿಕವಾಗಿ ಚಚರ್ೆ ನಡೆಸುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ. ರಾಜ್ಯಕ್ಕೆ ಭೇಟಿ ನೀಡುತ್ತಿರುವ ಕೇಂದ್ರದ ಎರಡನೇ ಸಚಿವರು ಇವರಾಗಿದ್ದು, ಇದಕ್ಕೂಮೊದಲು ಶನಿವಾರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸಿದ್ದರು.