ಮನೆಗೆ ಬೆಂಕಿ: ಒಂದೇ ಕುಟುಂಬದ ಐವರು ಸಜೀವದಹನ

 ಗುವಾಹಟಿ, ಅ.19:  ಅಸ್ಸಾಂನ ದಿರ್ಬುಗರ್ ಪಟ್ಟಣದಲ್ಲಿ ಕಳೆದ ರಾತ್ರಿ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಜೀವದಹನಗೊಂಡಿರುವ ಘಟನೆ ನಡೆದಿದೆ. ಕಳೆದ ರಾತ್ರಿ ಪಟ್ಟಣದ ನೀಜ್ ಕದಮಂಜ್ ಪ್ರದೇಶದಲ್ಲಿ ಹಲವು ಮನೆಗಳು ಬೆಂಕಿಗಾಹುತಿಯಾಗಿವೆ. ದುರಂತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಸದ್ಯ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ದುರಂತಕ್ಕೆ ಕಾರಣ ತಿಳಿದುಬಂದಿಲ್ಲ.  ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಇಂದು ದುರಂತಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ತ ಕುಟುಂಬಕ್ಕೆ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ದುರಂತದ ಬಗ್ಗೆ ತನಿಖೆ ನಡೆಸುವಂತೆ ದಿರ್ಬುಗರ್ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಸೋನೊವಾಲ್ ಸೂಚಿಸಿದ್ದಾರೆ. ಇಂದು ಬೆಳಗ್ಗೆ ಸ್ಥಳೀಯ ಶಾಸಕ ಪ್ರಶಾಂತ್ ಫುಕನ್ ಭೇಟಿ ನೀಡಿ, ಸಂತ್ರಸ್ತರಿಗೆ ಬೇರೆ ಕಡೆ ವಸತಿ ಸೌಲಭ್ಯವನ್ನು ಕಲ್ಪಿಸುವ ವ್ಯವಸ್ಥೆ ಮಾಡಿದ್ದಾರೆ.