ಬಂಟ್ವಾಳ, ಏ.4, ಕ್ಷುಲ್ಲಕ ಕಾರಣಕ್ಕೆ ಗೃಹಿಣಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಕೈಕಂಬ ಸಮೀಪದ ಪೆರ್ಲ ಎಂಬಲ್ಲಿ ಶನಿವಾರ ನಡೆದಿದೆ.ತುಂಬೆ ನಿವಾಸಿ ಅಬ್ಬಾಸ್ ಅಲಿ ಎಂಬವರ ಪತ್ನಿ ರಮೀಝಾ ಬಾನು(29) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ದಂಪತಿಗೆ ಮೂವರು ಮಕ್ಕಳಿದ್ದು, ತುಂಬೆ ನಿವಾಸಿಯಾಗಿದ್ದ ಇವರು ಕೆಲ ಸಮಯದ ಹಿಂದೆಷ್ಟೆ ಪೆರ್ಲದಲ್ಲಿ ಬಾಡಿಗೆಗೆ ಮನೆ ಪಡೆದು ವಾಸವಾಗಿದ್ದರು ಎಂದು ತಿಳಿದು ಬಂದಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ಮೃತಳ ಪತಿ ಆಟೋ ಚಾಲಕನಾಗಿದ್ದು, ಕೊರೊನಾ ಸೋಂಕು ತಡೆಗಟ್ಟಲು ಲಾಕ್ ಡೌನ್ ಆದೇಶವಿದ್ದರೂ ಆಟೋ ತೆಗೆದುಕೊಂಡು ಮನೆಯಿಂದ ಹೊರ ಹೋದ ಕಾರಣಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇತ್ತೀಚೆಗಷ್ಟೇ ಮಹಿಳೆ ಮೂರನೇ ಮಗುವಿನೆ ಜನ್ಮ ನೀಡಿದ್ದರು ಎಂದು ತಿಳಿದುಬಂದಿದೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.ಸದ್ಯ, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ.