ಹುಬ್ಬಳ್ಳಿ, ಡಿ.6- ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್‍ಕೌಂಟರ್ ಮಾಡಿದ ಪೊಲೀಸ್ ತಂಡದ ನೇತೃತ್ವ ವಹಿಸಿದವರು ಕರ್ನಾಟಕದ ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ . ಇದೀಗ ಕರ್ನಾಟಕ ಸೇರಿದಂತೆ ದೇಶಾದ್ಯಂತ ಸಜ್ಜನ್ ಅವರಿಗೆ ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದೆ.
ವಿಶ್ವನಾಥ್ ಸಜ್ಜನರ್ ಎನ್‍ಕೌಂಟರ್ ಸ್ಪೆಷಲಿಸ್ಟ್ ಆಗಿದ್ದು, ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ವಿಶ್ವನಾಥ್ ಸಜ್ಜನರ್ ವಾರಂಗಲ್ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ಅವರ ಕಾರ್ಯ ವ್ಯಾಪ್ತಿಯಲ್ಲಿ ಆಸಿಡ್ ದಾಳಿ ನಡೆದಿದ್ದು, ಆಗಲೂ ಆರೋಪಿಯನ್ನು ಅವರು ಎನ್‌ಕೌಂಟರ್ ಮೂಲಕ ಹತ್ಯೆಗೈದಿದ್ದರು. ಇದರಿಂದ ತೆಲಂಗಾಣದಲ್ಲಿ ಆ್ಯಸಿಡ್ ದಾಳಿ ಪ್ರಕರಣ ಇಳಿಮುಖವಾಗಿತ್ತು.
ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಇಂದು ಬೆಳಗ್ಗಿನ ಜಾವ ಆರೋಪಿಗಳ ಮೇಲೆ ಎನ್‍ಕೌಂಟರ್ ಮಾಡಿದ್ದಾರೆ. ಕಾಮುಕರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದ 100 ಮೀಟರ್ ವ್ಯಾಪ್ತಿಯಲ್ಲೇ ಎನ್‌ಕೌಂಟರ್ ಮಾಡಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.