ಬೆಳಗಾವಿ/ಖಾನಾಪುರ 22: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್) ಆಡಳಿತ ಮಂಡಳಿಯ ಚುನಾವಣೆಯಲ್ಲಿ ಖಾನಾಪುರ ಕ್ಷೇತ್ರದಿಂದ ಕಣಕ್ಕಿಳಿಯಲು ತಾವೂ ಸಹ ಪ್ರಬಲ ಆಕಾಂಕ್ಷಿ ಎಂದು ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳಕರ ಹೇಳಿದರು.
ಪಟ್ಟಣದ ತಮ್ಮ ನಿವಾಸದಲ್ಲಿ ಸೋಮವಾರ ಕಾಂಗ್ರೆಸ್ ಮುಖಂಡರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ತಾಲ್ಲೂಕಿನಿಂದ ಹೊರಗಿನ ಕೆಲ ’ಭೂಮಿಪುತ್ರರು’ ಇಲ್ಲಿಂದ ಬಿಡಿಸಿಸಿ ಚುನಾವಣೆಗೆ ಸ್ಪರ್ಧಿಸುವ ಸಿದ್ಧತೆ ನಡೆಸುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ. ಆದರೆ ಅವರ ಪ್ರಯತ್ನಕ್ಕೆ ಪಕ್ಷದ ಮುಖಂಡರು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಕರೆ ನೀಡಿದರು.
ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈಗಿನಿಂದಲೇ ಪಕ್ಷ ಸಂಘಟನೆ ಮಾಡಬೇಕು. ಮತದಾರರ ಬಳಿ ಹೋಗಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಒದಗಿಸಬೇಕು ಎಂದು ಅವರು ಸೂಚಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದ ಮುಖಂಡರು ಪಕ್ಷ ಸಂಘಟನೆ, ಚುನಾವಣೆಯ ಸಿದ್ಧತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ತಮ್ಮ ಸಲಹೆ-ಸೂಚನೆ ನೀಡಿದರು. ಪಕ್ಷದ ಬ್ಲಾಕ್ ಅಧ್ಯಕ್ಷ ಮಹಾಂತೇಶ ರಾಹೂತ ಸ್ವಾಗತಿಸಿದರು. ಕೆಪಿಸಿಸಿ ಸದಸ್ಯ ಮಹಾದೇವ ಕೋಳಿ ಸಭೆ ನಿರ್ವಹಿಸಿದರು. ಗ್ರಾಮೀಣ ಘಟಕದ ಅಧ್ಯಕ್ಷ ಈಶ್ವರ ಘಾಡಿ ವಂದಿಸಿದರು.