ಚೀನಾದಲ್ಲಿ ಪರಿಸ್ಥಿತಿ ಸುಧಾರಣೆ, ಅಗತ್ಯ ವಸ್ತುಗಳ ಆಮದು ನಿರೀಕ್ಷೆ : ಡಾ. ಅಶ್ವತ್ಥನಾರಾಯಣ್

ಬೆಂಗಳೂರು, ಮಾ 24, ಕೊರೊನಾ ತಡೆ ಹಾಗೂ ಚಿಕಿತ್ಸೆಗೆ ಅಗತ್ಯವಿರುವ ವೈದ್ಯಕೀಯ ಉಪಕರಣ ಖರೀದಿ, ಸಂಗ್ರಹ ಪ್ರಕ್ರಿಯೆ ಜತೆಗೆ ಆಸ್ಪತ್ರೆಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ್  ಹೇಳಿದ್ದಾರೆ.ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ಮತ್ತು ಚಿಕಿತ್ಸೆಗೆ ಅಗತ್ಯ ಪರಿಕರಗಳನ್ನು ಒದಗಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾಧಿಕಾರಿ ಮತ್ತು ವೆಂಟಿಲೇಟರ್ ಪೂರೈಕೆದಾರರ ಜತೆ ಸೋಮವಾರ ವೀಡಿಯೋ ಕಾನ್ಫರೆನ್ಸ್ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರೋಗ ನಿಯಂತ್ರಣ ಹಾಗೂ ಚಿಕಿತ್ಸೆಗೆ ಅಗತ್ಯ ಇರುವ ಉಪಕರಣಗಳ ಖರೀದಿ ಹಾಗೂ ಸಂಗ್ರಹ ಪ್ರಕ್ರಿಯೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಅದರಂತೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.
ಚೀನಾದಲ್ಲಿ ಈಗ ಪರಿಸ್ಥಿತಿ ಸುಧಾರಿಸಿದ್ದು, ಅಲ್ಲಿಂದ ಅಗತ್ಯ ವಸ್ತುಗಳ ಆಮದು ಸಾಧ್ಯವಾಗಬಹುದು. ಅದೇ ರೀತಿ ಥೈವಾನ್, ದಕ್ಷಿಣ ಕೊರಿಯಾ ಸೇರಿದಂತೆ ಅಂತಾರಾಷ್ಟ್ರೀಯ ಪೂರೈಕೆದಾರರು ಹಾಗೂ ವ್ಯಾಪಾರಿಗಳಿಂದ ಖರೀದಿ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆ ಇದೆ. ನಮ್ಮ ಬೇಡಿಕೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುತ್ತದೆ, ಹಾಗಾಗಿ ವೈದ್ಯಕೀಯ ಸಲಕರಣೆಗಳು ಎಷ್ಟು ಬೇಕು ಎಂದು ನಿರ್ದಿಷ್ಟ ಸಂಖ್ಯೆ ಹೇಳಲಾಗದು. ಅಗತ್ಯಕ್ಕೆ ಅನುಗುಣವಾಗಿ ಖರೀದಿ ಆದೇಶ ಮಾಡಲಾಗುತ್ತಿದೆ,"ಎಂದು ಉಪಮುಖ್ಯಮಂತ್ರಿ ತಿಳಿಸಿದರು.
"ಕೊರೊನಾ ತಡೆಗೆ ಸರ್ಕಾರ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಎದುರಾಗುತ್ತಿರುವ ಹೊಸ ಸವಾಲುಗಳ ಬಗ್ಗೆ ಚರ್ಚಿಸಿ ಸೂಕ್ತ ಕ್ರಮ ವಹಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಿರಂತರ ಸಭೆ ನಡೆಯಲಿದೆ. ಜತೆಗೆ ಸಾರ್ವಜನಿಕರ ಸಮಸ್ಯೆಗಳನ್ನು ನಿವಾರಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮೇಲ್ವಿಚಾರಣೆ ನಡೆಸುತ್ತಿದ್ದಾರೆ," ಎಂದರು.
"ಸದ್ಯ ಸಂಪೂರ್ಣ ಜನಜೀವನ ಸ್ತಬ್ಧಗೊಳಿಸಿಲ್ಲ. ಸಾಧ್ಯವಾದ ಮಟ್ಟಿಗೆ ಹೊರಗಿನ ಚಟುವಟಿಕೆಗಳನ್ನು ನಿಯಂತ್ರಿಸಲಾಗಿದೆ. ಜನ ಒಂದೇ ಕಡೆ ಸೇರದಂತೆ ತಡೆಯಲಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಮುಖ್ಯ, ಈ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ," ಎಂದು ಅವರು ತಿಳಿಸಿದರು.
"ವರ್ಕ್ ಫ್ರಮ್ ಹೋಮ್, ಪಾಳಿ ಹಾಗೂ ಬದಲಿ ವ್ಯವಸ್ಥೆ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಪ್ರಯತ್ನ ಮಾಡಲಾಗಿದೆ. ಐಟಿ ಕಂಪನಿಗಳ ಶೇ. 80ರಷ್ಟು ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಇಂಟರ್ನೆಟ್ ಸಂಪರ್ಕ ಸಮಸ್ಯೆ ಕೇಳಿ ಬಂದ ಹಿನ್ನೆಲೆಯಲ್ಲಿ ಬ್ರಾಡ್ಬ್ಯಾಂಡ್ ವೇಗ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಕೆಲಸ, ಆರೋಗ್ಯ ಹಾಗೂ ಬ್ಯಾಂಕಿಂಗ್ ಮುಂತಾದ ಅಗತ್ಯ ಸೇವೆ ಒದಗಿಸುವಂತಹ ಐಟಿ ಉದ್ಯೋಗಿಗಳು ಮಾತ್ರ ಕಚೇರಿಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಇದನ್ನು ತಡೆದರೆ ವ್ಯವಸ್ಥೆಯೇ ಸ್ತಬ್ಧಗೊಳ್ಳುತ್ತದೆ ಎಂಬ ಕಾರಣಕ್ಕೆ ಈ ಕ್ರಮ ಜರುಗಿಸಲಾಗಿದೆ. ಉಳಿದಂತೆ ಹೆಚ್ಚಿನವರಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ,"ಎಂದು ಅವರು ಹೇಳಿದರು.