ಬಳ್ಳಾರಿ, ಮೇ 24,ರಾಜ್ಯದಲ್ಲಿ ಜೂನ್ ಮತ್ತು ಜುಲೈನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಹರಡುವ ಮುನ್ಸೂಚನೆ ಇದ್ದು, ಎಲ್ಲ ಜಿಲ್ಲೆಗಳಲ್ಲಿ ‘ಓಪನ್ ಆಸ್ಪತ್ರೆ’ಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಂಕಿತರಿಗೆ ಚಿಕಿತ್ಸೆ ನೀಡಲು ಮೈದಾನ, ಕ್ರೀಡಾಂಗಣದಂತಹ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ಇಂತಹ ಮುಕ್ತ ಆಸ್ಪತ್ರೆ ವ್ಯವಸ್ಥೆಗೆ ಸಿದ್ಧತೆ ನಡೆಸಲಾಗುತ್ತಿದೆ. ಈ ಬಗ್ಗೆ ಕಾರ್ಯಪಡೆ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು, ಗ್ರಾಮೀಣ ಭಾಗಕ್ಕೆ ಸೋಂಕು ಹರಡದಂತೆ ತಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.ಎಂಬಿಬಿಎಸ್ ವೈದ್ಯರಂತೆ ಆಯುಷ್ ವೈದ್ಯರ ವೇತನ ತಾರತಮ್ಯ ನಿವಾರಿಸುವ ಕುರಿತು ಮಂಗಳವಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿ.ಶ್ರೀರಾಮುಲು ಹೇಳಿದರು.ಆಯುಷ್ ವೈದ್ಯರ ಬೇಡಿಕೆ ನ್ಯಾಯಸಮ್ಮತವಾಗಿದೆ. ಈ ಬಗ್ಗೆ ಸರ್ಕಾರದ ಹಂತದಲ್ಲಿ ಜೊತೆ ಮಾತುಕತೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಆಯುಷ್ ಮತ್ತು ಎಂಬಿಬಿಎಸ್ ವೈದ್ಯರ ಮಧ್ಯೆ ಯಾವುದೇ ತಾರತಮ್ಯವನ್ನು ಮಾಡುವುದಿಲ್ಲ ಎಂದು ಹೇಳಿದರು.