ಬೀಳಗಿಯಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆ

ಬೀಳಗಿಯಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆ  Independence Day celebrations in Bilagi on August 15.


ಬೀಳಗಿ  03 : ತಾಲ್ಲೂಕಾಡಳಿತದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15ರಂದು ಬೆಳಿಗ್ಗೆ 9 ಗಂಟೆಗೆ ಮಿನಿ ಸೌಧದ ಮುಂಭಾಗದ ಮೈದಾನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್ ವಿನೋದ ಹತ್ತಳ್ಳಿ ತಿಳಿಸಿದ್ದಾರೆ.  ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗೆ ಈಗಾಗಲೇ ಉಪಸಮಿತಿಗಳನ್ನು ರಚಿಸಲಾಗಿದ್ದು, ಪ್ರತಿಯೊಂದು ಸಮಿತಿಯ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಸಮರ​‍್ಕವಾಗಿ ನಿರ್ವಹಿಸುವಂತೆ ಸೂಚಿಸಿದರು.  ಪಥಸಂಚಲನದ ಜವಾಬ್ದಾರಿಯನ್ನು ಪೊಲೀಸ್ ಇಲಾಖೆ ವಹಿಸಿಕೊಳ್ಳಬೇಕು. ಪಥಸಂಚಲನದಲ್ಲಿ ಭಾಗವಹಿಸುವ ತಂಡಗಳು ಪೂರ್ವಾಭ್ಯಾಸ ನಡೆಸಬೇಕು ಎಂದು ತಿಳಿಸಿದರು.  

ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಬಟ್ಟೆಯಲ್ಲಿ ಮುದ್ರಿಸಿದ ಬ್ಯಾನರ್ಗಳನ್ನು ಮಾತ್ರ ಬಳಸಬೇಕು. ಪ್ಲಾಸ್ಟಿಕ್ನಿಂದ ತಯಾರಿಸಿದ ಧ್ವಜಗಳನ್ನು ಬಳಸಬಾರದು ಹಾಗೂ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಹೇಳಿದರು.  ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.  ಆ.14 ಮತ್ತು 15ರಂದು ನಗರದ ಪ್ರಮುಖ ವೃತ್ತಗಳು ಹಾಗೂ ವಿವಿಧ ಇಲಾಖೆಗಳ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.