ಭಾರತ ಪ್ರಪಂಚದಲ್ಲೇ ಬಲಿಷ್ಠ ರಾಷ್ಟ್ರವಾಗಬೇಕು : ಗೋವಿಂದ ಎಂ ಕಾರಜೋಳ

ಬಾಗಲಕೋಟೆ, ಫೆ.28:  ಭಾರತ ಪ್ರಪಂಚದಲ್ಲೇ ಅತ್ಯಂತ ಬಲಿಷ್ಠ ರಾಷ್ಟ್ರವಾಗಬೇಕಿದ್ದು, ಇದಕ್ಕೆ ಯುವ ಸಮೂಹ ಕೈಜೋಡಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಕರೆ ನೀಡಿದ್ದಾರೆ.

ಜಿಲ್ಲಾಡಳಿತ ಆಯೋಜಿಸಿದ್ದ ಉದ್ಯೋಗ ಮೇಳದ ಸಮಾರೋಪ ಸಮಾರಂಭದಲ್ಲಿ  ಆಯ್ಕೆಯಾದವರಿಗೆ ನೇಮಕಾತಿ ಆದೇಶ ನೀಡಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದ್ದಾರೆ.  ಅದೇ ರೀತಿ ದೇಶದ ಪ್ರತಿಯೊಬ್ಬರೂ ಈ ನಿಟ್ಟಿನಲ್ಲಿ ಶ್ರಮಿಸಬೇಕು. ಇದಕ್ಕೆ ಕೌಶಲ್ಯ ಅಭಿವೃದ್ಧಿ ತರಬೇತಿ  ಕಾರ್ಯಕ್ರಮ ಪೂರಕವಾಗಿದೆ ಎಂದರು. 

ರಾಜ್ಯ ಸರ್ಕಾರ ಕೌಶಲ್ಯ ಅಭಿವೃದ್ಧಿ ತರಬೇತಿ  ಕಾರ್ಯಕ್ರಮಗಳಿಗೆ ಒತ್ತು ನೀಡುತ್ತಿದೆ. ಎಲ್ಲಾ ಜಿಲ್ಲೆಗಳಲ್ಲಿ ಉದ್ಯೋಗ ಮೇಳ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿ ಅರ್ಹ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಆದೇಶ ಪತ್ರಗಳನ್ನು ನೀಡಲಾಗುತ್ತಿದೆ. ಬಾಗಲಕೋಟೆಯಲ್ಲಿ ನಡೆದ ಉದ್ಯೋಗ ಮೇಳದಲ್ಲಿ 6200 ಅಭ್ಯರ್ಥಿಗಳು ನೋಂದಣಿಯಾಗಿದ್ದು, ಅವರಲ್ಲಿ 2824 ಪುರುಷರು ಹಾಗೂ 1115 ಮಹಿಳಾ ಅಭ್ಯರ್ಥಿಗಳು ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಿದ್ದರು. ಈ ಪೈಕಿ 1208 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಅವರಲ್ಲಿ 18 ಅಂಗವಿಕಲ ಅಭ್ಯರ್ಥಿಗಳಿದ್ದಾರೆ. 853 ಅಭ್ಯರ್ಥಿಗಳು ಕಾಯ್ದಿರಿಸಿದ ಪಟ್ಟಿಯಲ್ಲಿದ್ದಾರೆ ಎಂದರು. 

ಆಯ್ಕೆಯಾದವರು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಬೇಕು. ಆಗ ಯಶಸ್ದು ದೊರಕುವ ಜತೆಗೆ ಹೆಚ್ಚಿನ ಅವಕಾಶಗಳು ಲಭಿಸುತ್ತವೆ. ಉದ್ಯೋಗ ನೀಡಿದ ಸಂಸ್ಥೆಗಳು ಸದೃಡವಾಗುತ್ತವೆ. ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಿ, ನೀರು ಲಭ್ಯವಿದ್ದು, ಉದ್ಯಮ ಸ್ಥಾಪನೆಗೆ ವಿಪುಲ ಅವಕಾಶಗಳಿವೆ ಎಂದು ಅವರು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಮುರುಗೇಶ್ ಆರ್. ನಿರಾಣಿ ಮಾತನಾಡಿದರು. ಶಾಸಕರಾದ ಡಾ. ವೀರಣ್ಣ ಚರಂತಿಮಠ ಅಧ್ಯಕ್ಷತೆವಹಿಸಿದ್ದರು.  ಜಿಲ್ಲಾಧಿಕಾರಿ ಕ್ಯಾಪ್ಟನ್  ರಾಜೇಂದ್ರ ವಂದಿಸಿದರು. ಪೋಲೀಸ್‌ ವರಿಷ್ಠಾಧಿಕಾರಿ , ಜಿ.ಪಂ ಸಿ ಇಓ ಮತ್ತಿತರರು ಉಪಸ್ಥಿತರಿದ್ದರು.