ಏ.26 ರಿಂದ ಜೂ.9ರವರೆಗೆ 7ನೇ ಸುತ್ತಿನ ಲಸಿಕಾ ಅಭಿಯಾನಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಅಭಿಯಾನ ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಸೂಚನೆ
- ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
ಹಾವೇರಿ 21: ಕಾಲು ಬಾಯಿ ಬೇನೆ ರೋಗವು ಜಾನುವಾರುಗಳಿಗೆ ಮಾರಕವಾಗಿದ್ದು, ಈ ರೋಗದ ನಿರ್ಮೂಲನೆಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯೊಂದಿಗೆ ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದೆ. ಹಾಗಾಗಿ ಇತರೆ ಇಲಾಖೆಗಳು ಪಶುಪಾಲನಾ ಇಲಾಖೆಯೊಂದಿಗೆ ಕೈಜೋಡಿಸಿ ಲಸಿಕಾ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏಳನೇ ಸುತ್ತಿನ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮದ ಹಾವೇರಿ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಸಿಕಾ ಕಾರ್ಯಕ್ರಮದಲ್ಲಿ ಎಲ್ಲ ರೈತಾಪಿ ಜನರು ತಮ್ಮಲ್ಲಿರುವ ಎಲ್ಲ ಜಾನುವಾರುಗಳಿಗೆ (ದನ ಮತ್ತು ಎಮ್ಮೆಗಳಿಗೆ) ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿಕೊಂಡರು.
ನಮ್ಮ ದೇಶದಿಂದ ರೋಗವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ವಾರ್ಷಿಕವಾಗಿ ಎರಡು ಬಾರಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಜಾನುವಾರುಗಳು ರೈತನ ಬೆನ್ನೆಲುಬು ಅವುಗಳ ರಕ್ಷಣೆಗೆ ಕಾಲ ಕಾಲಕ್ಕೆ ಲಸಿಕೆ ಹಾಕುವ ಮೂಲಕ ಮತ್ತು ರೋಗ ಪೀಡಿತ ಜಾನುವಾರುಗಳಿಗೆ ಚಿಕಿತ್ಸೆ ನೀಡುವ ಮೂಲಕ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಎಲ್ಲ ಅಗತ್ಯ ಕ್ರಮಗಳನ್ನು ಪಶುಪಾಲನಾ ಇಲಾಖೆಯ ವತಿಯಿಂದ ಸೂಕ್ತವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
ಶೇ,100 ರಷ್ಟು ಲಸಿಕೆ: ಏಳನೇ ಸುತ್ತಿನ ಕಾಲು ಬಾಯಿ ಬೇನೆ ಲಸಿಕಾ ಕಾರ್ಯಕ್ರಮದಲ್ಲಿ ಲಸಿಕೆಗೆ ಅರ್ಹವಿರುವ ಜಾನುವಾರುಗಳಿಗೆ ಶೇ. 100 ರಷ್ಟು ಲಸಿಕೆ ಹಾಕುವ ಕಾರ್ಯವನ್ನು ನಿಗಧಿಪಡಿಸಿದ 45 ದಿನಗಳ ಅವಧಿಯಲ್ಲಿ ಪೂರ್ಣಗೊಳಿಸಲು ಎಲ್ಲ ಅಧಿಕಾರಿಗಳು ಸನ್ನದ್ದರಾಗಿರಬೇಕೆಂದು ಸೂಚಿಸಿದರು.ಪ್ರಚಾರ ಸಾಮಗ್ರಿ ಬಿಡುಗಡೆ: ಇದೇ ಸಂದರ್ಭದಲ್ಲಿ ಈ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮದ ಪೋಸ್ಟರ‌್ಸ ಮತ್ತು ಬ್ಯಾನರ್ಸ ಬಿಡುಗೊಳಿಸಿ ಮಾತನಾಡಿದ ಅವರು, ಲಸಿಕಾ ಕಾರ್ಯಕ್ರಮಕ್ಕೆ ಹಾವೇರಿ ಹಾಲು ಒಕ್ಕೂಟ ವ್ಯಾಪ್ತಿಯ ಸಿಬ್ಬಂದಿಗಳ ಸಹಕಾರ ಪಡೆದುಕೊಂಡು ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಜೊತೆಗೆ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳು ಈ ಕಾರ್ಯಕ್ರಮದ ಬಗ್ಗೆ ವ್ಯಾಪಕವಾಗಿ ಪ್ರಚಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
2.95 ಲಕ್ಷ ಜಾನುವಾರುಗಳು:ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಎಸ್.ವಿ.ಸಂತಿ ಅವರು ಮಾತನಾಡಿ, ಏಪ್ರಿಲ್ 26 ರಿಂದ ಜೂನ್ 09ರ ವರೆಗೆ ಕಾಲು ಬಾಯಿ ಲಸಿಕಾ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲೆಯಲ್ಲಿ ಅಂದಾಜು 2.95 ಲಕ್ಷ (ದನ ಮತ್ತು ಎಮ್ಮೆ) ಜಾನುವಾರುಗಳಿರುತ್ತವೆ. ಲಸಿಕಾ ಅಭಿಯಾನದಲ್ಲಿ ಇಲಾಖೆಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಮನೆ ಬಾಗಿಲಿಗೆ ಹೋಗಿ ಕಾಲುಬಾಯಿ ಲಸಿಕೆ ಹಾಕುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಪಶುಪಾಲನಾ ಇಲಾಖೆಯ ಹಾಗೂ ಇಲಾಖೇತರ ಲಸಿಕೆದಾರರನ್ನು ಒಳಗೊಂಡು ಒಟ್ಟು 157 ತಂಡಗಳನ್ನು ರಚಿಸಲಾಗಿರುತ್ತದೆ. ಪ್ರತಿ ತಾಲ್ಲೂಕಿನಲ್ಲಿ ಲಸಿಕಾ ವೇಳಾ ಪಟ್ಟಿ ಮತ್ತು ಜಾನುವಾರು ಹೊಂದಿರುವ ರೈತರ ಮಾಹಿತಿಯನ್ನು ಗ್ರಾಮವಾರು ತಯಾರಿಸಲಾಗಿದೆ. ಅದರಲ್ಲಿ ಗ್ರಾಮಗಳ ಹೆಸರು, ಜಾನುವಾರುಗಳ ಸಂಖ್ಯೆ, ಜಾನುವಾರು ಮಾಲೀಕರ ಹೆಸರು, ಮೊಬೈಲ್ ಸಂಖ್ಯೆ, ಆಧಾರ ಸಂಖ್ಯೆ, ಲಸಿಕಾದಾರರ ವಿವರ ಹಾಗೂ ಜಾನುವಾರುವಿನ ಕಿವಿ ಓಲೆ ಸಂಖ್ಯೆ ವಿವರಗಳು ಲಭ್ಯವಿರುತ್ತವೆ ಎಂದರು.3.38 ಲಕ್ಷ ಡೋಸ್ ಲಸಿಕೆ: ಪ್ರತಿ ಗ್ರಾಮ ಅಥವಾ ನಗರ ಪ್ರದೇಶವನ್ನು 100 ರಿಂದ 120 ಜಾನುವಾರುಗಳಿಗೆ ಒಂದು ಬ್ಲಾಕ್ ಎಂದು ವರ್ಗೀಕರಿಸಿ ಒಟ್ಟು 2924 ಬ್ಲಾಕ್‌ಗಳಲ್ಲಿ ಲಸಿಕಾದಾರರು ಲಸಿಕೆ ಹಾಕಲಿದ್ದಾರೆ. ಪ್ರತಿ ಜಾನುವಾರಿಗೆ ಒಂದರಂತೆ ಸೀರಿಂಜ್ ಉಪಯೋಗಿಸಿ ಲಸಿಕೆ ನೀಡಲಿದ್ದಾರೆ. ಜಿಲ್ಲೆಗೆ ಈಗಾಗಲೇ 3,38,650 ಡೋಸ್ ಲಸಿಕೆ ಸರಬರಾಜಾಗಿದೆ. ಈ ಲಸಿಕೆಯನ್ನು ತಾಲ್ಲೂಕಿನಲ್ಲಿರುವ ಜಾನುವಾರುಗಳ ಸಂಖ್ಯೆಗೆ ಅನುಗುಣವಾಗಿ ವಿಂಗಡಿಸಿ ಮರು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶದ, ಯೋಜನಾ ನಿರ್ದೇಶಕರು, ಹಾವೇರಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧಿಕಾರಿಗಳು, ಲಸಿಕಾ ಕಾರ್ಯಕ್ರಮದ ಜಿಲ್ಲಾ ಉಸ್ತುವಾರಿ ಅಧಿಕಾರಿ ಡಾ.ಕಿರಣ ಕೊಪ್ಪದ, ಮುಖ್ಯ ಪಶುವೈದ್ಯಾಧಿಕಾರಿಗಳು (ತಾಂತ್ರಿಕ), ಎಲ್ಲಾ ತಾಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.