ಮಾದಕ ವಸ್ತುಗಳ ಮಾರಾಟ ತಡೆಗೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ

ಹಾವೇರಿ 19: ಜಿಲ್ಲೆಯಲ್ಲಿ ಎಲ್ಲ ಸ್ಥಳಗಳಲ್ಲಿ ಗುಟುಕಾ, ತಂಬಾಕು ಮತ್ತು ಸಿಗರೇಟ್ ದಂತಹ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದು, ಇವುಗಳ ತಡೆಗೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ  ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಂಬಾಕು ನಿಯಂತ್ರಣ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಿದ ಅವರು, ಹಾವೇರಿ ನಗರದ ಬಸ್ ಸ್ಟ್ಯಾಂಡ್‌ನಲ್ಲಿ ಅತಿ ಹೆಚ್ಚು ಗುಟುಕ ಸೇವನೆ ಮಾಡುತ್ತಿರುವುದು ಕಂಡುಬರುತ್ತಿದೆ. ಗುಟುಕ ಜಗಿದು ಉಗಿಯುತ್ತಿರುವವರ ಸಂಖ್ಯೆ ಜಾಸ್ತಿ ಆಗುತ್ತಿದೆ. ಇದರಿಂದ ಸಾರ್ವಜನಿಕರು ಇಂತಹ ಪ್ರದೇಶಗಳಲ್ಲಿ ನಿಲ್ಲಲು ಕೂಡ ಆಗುತ್ತಿಲ್ಲ ಅದನ್ನು ಹತ್ತೋಟಿಗೆ ತರಲು ಕ್ರಮ ವಹಿಸಬೇಕು ಎಂದರು. 

ಚಿಲ್ಲರೆ ಅಂಗಡಿಗಳ ಮೇಲೆ ದಾಳಿ ಮಾಡಿ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡು ಅಧಿಕ ದಂಡ ವಿಧಿಸಬೇಕು ಮತ್ತು ಅವರಿಗೆ ತಂಬಾಕು ಉತ್ಪನ್ನಗಳನ್ನು ಮಾರದಂತೆ ತಿಳಿ ಹೇಳಬೇಕು ಎಂದರು.  

ಡಾ. ಸಂತೋಷ ಅವರು ಮಾತನಾಡಿ,  ಜಿಲ್ಲಾ ಮಟ್ಟದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಶಾಲಾ ಕಾಲೇಜಗಳಲ್ಲಿ ಆರೋಗ್ಯ ಜಾಗೃತಿ, ಸಮುದಾಯ ಗುಂಪು ಚರ್ಚೆ, ತರಬೇತಿ ಮತ್ತು ಕಾರ್ಯಗಾರಗಳು, ಜಿಲ್ಲಾ ಮಟ್ಟದಲ್ಲಿ ಆಪ್ತ ಸಮಾಲೋಚನೆ ಮತ್ತು ಚಿಕಿತ್ಸಾ ಸೌಲಭ್ಯಗಳನ್ನು ಪೂರೈಸುವುದು, ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ತಂಬಾಕು ನಿಯಂತ್ರಣ ಕಾಯ್ದೆಯ(ಅಓಖಿಕಂ-2003) ಪರಿಣಾಮಕಾರಿ ಅನುಷ್ಠಾನ ಮುಂತಾದವುಗಳ ಕುರಿತು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಆರೋಗ್ಯ ಇಲಾಖೆ  ಸೇರಿದಂತೆ ವಿವಿಧ  ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.