ನವದೆಹಲಿ, ಜ 6 ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಭಾನುವಾರ ನಡೆದ ದಾಳಿ ಪ್ರಕರಣಗಳನ್ನು ದೆಹಲಿಯ ಕ್ರೈಂ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಸಂಬಂಧ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಜೆಎನ್ ಯು ಪ್ರತಿನಿಧಿಗಳೊಂದಿಗೆ ಚರ್ಚಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಜೆನ್ ಯು ಕುಲಪತಿ ಮತ್ತು ರಿಜಿಸ್ಟ್ರಾರ್ ಬೈಜಾಲ್ ಅವರನ್ನು ಭೇಟಿ ಮಾಡಿ ಪರಿಸ್ಥಿತಿಯ ಕುರಿತು ಮಾಹಿತಿ ನೀಡಿದ್ದಾರೆ.
ಭಾನುವಾರ ದೆಹಲಿ ಪೊಲೀಸರಿಗೆ ಪ್ರಕರಣದ ತನಿಖೆ ನಡೆಸುವಂತೆ ಆದೇಶ ನೀಡಿದ್ದ ಅಮಿತ್ ಶಾ, ಶೀಘ್ರದಲ್ಲೇ ವರದಿ ಸಲ್ಲಿಸುವಂತೆ ಸೂಚಿಸಿದ್ದರು.
ಭಾನುವಾರ ಮುಖಗವಸು ಧರಿಸಿದ 40 ವ್ಯಕ್ತಿಗಳು ಜೆನ್ ಯು ಆವರಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರ ಮೇಲೆ ಲಾಠಿ, ರಾಡು ಮತ್ತುಸುತ್ತಿಗೆಗಳಿಂದ ದಾಳಿ ನಡೆಸಿದ್ದು, 30 ಜನರಿಗೆ ಗಾಯಗಳಾಗಿದ್ದವು.