ಬಾಲ್ಯವಿವಾಹ ನಿಷೇಧಕ್ಕೆ ಕೈಜೋಡಿಸಿ - ಮಹಾಂತಸ್ವಾಮಿ ಪೂಜಾರ
Join hands to ban child marriage - Mahantaswamy Pujara
ಕೊಪ್ಪಳ 13 : ಬಾಲ್ಯವಿವಾಹವು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಬಾಲ್ಯವಿವಾಹ ನಿಷೇಧಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಹೇಳಿದರು. ಅವರು ಬುಧವಾರ ಗಂಗಾವತಿಯ ಪಂಪನಗರದ ಶ್ರೀ ಕೊಟ್ಟೂರೇಶ್ವರ ಸಂಯುಕ್ತ ವಿಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಹಾಗೂ ಮಕ್ಕಳ ಸಹಾಯವಾಣಿ-1098, 112 ಮತ್ತು ವಿವಿಧ ಇಲಾಖೆಗಳು, ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ದತ್ತು ಮಾಸಾಚರಣೆ ಹಾಗೂ ಮಕ್ಕಳ ಮಾಸ ಆಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಬಾಲ್ಯವಿವಾಹ ನಿಷೇದ ಕಾಯ್ದೆ-2006 ಮತ್ತು ಪೋಕ್ಸೊ ಕಾಯ್ದೆ-2012 ಹಾಗೂ ದತ್ತು ಕಾರ್ಯಕ್ರಮದ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಿವಾಹವನ್ನು ಮಾಡುವುದರಿಂದ ಮಕ್ಕಳು ದೈಹಿಕ, ಮಾನಸಿಕ, ಶಾರೀರಿಕ ಬೆಳವಣಿಗೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದು ಅಲ್ಲದೇ, ಹುಟ್ಟುವ ಮಗುವು ವಿಕಲಚೇತನ ಅಪೌಷ್ಠಿಕ ಅಥವಾ ಶಿಶು ಮರಣ ಸಾಧ್ಯತೆ ಅಧಿಕವಾಗಿರುವುದು, ತಾಯಿ ಅಥವಾ ಮಗು ಇಬ್ಬರು ಮೃತಪಡಬಹುದಾಗಿರುತ್ತದೆ. ಈ ಎಲ್ಲಾ ಅಂಶಗಳನ್ನು ಗಮನಿಸಿ ಸರ್ಕಾರವು ಬಾಲ್ಯವಿವಾಹ ನಿಷೇಧ ಕಾಯ್ದೆ-2006 ರನ್ನು ಜಾರಿಗೆ ತಂದಿರುತ್ತದೆ. ರಾಜ್ಯದಲ್ಲಿ ಬಾಲ್ಯವಿವಾಹ ಪ್ರಮಾಣಗಳು ಅಧಿಕವಾಗಿರುವುದನ್ನು ಗಮನಿಸಿ ಕರ್ನಾಟಕ ಸರ್ಕಾರವು ಮತ್ತಷ್ಟು ಪರಿಣಾಮಕಾರಿಯಾಗಿ ಈ ಕಾಯ್ದೆಯನ್ನು ಅನುಷ್ಠಾನಗೊಳಿಸಲು-2016ರಲ್ಲಿ ತಿದ್ದುಪಡಿಯನ್ನು ತಂದಿರುತ್ತದೆ. ಅದರನ್ವಯ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮದುವೆಯನ್ನು ಮಾಡಿದವರಿಗೆ, ಭಾಗವಹಿಸಿದವರಿಗೆ ಮತ್ತು ಪ್ರೋತ್ಸಾಹಿಸಿದವರಿಗೆ ಕನಿಷ್ಠ ಒಂದು ವರ್ಷದಿಂದ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಬಹುದಾಗಿದೆ. ದಿನಾಂಕ: 03.03.2018ರಿಂದ ಎಲ್ಲಾ ಬಾಲ್ಯವಿವಾಹಗಳು ಅಸಿಂಧು ವಿವಾಹಗಳಾಗಿರುತ್ತವೆ ಎಂದರು.ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದನ್ವಯ ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗಿನ ಲೈಂಗಿಕ ಸಂಪರ್ಕವೂ ಸಹ “ಲೈಂಗಿಕ ಅಪರಾಧಗಳೆಂದು” ಪರಿಗಣಿಸಲಾಗುತ್ತದೆ. ಜಿಲ್ಲೆಯಲ್ಲಿ ಈ ರೀತಿಯ ಹಲವಾರು ಪ್ರಕರಣಗಳು ದಾಖಲಾಗಿರುವುದನ್ನು ಗಮನಿಸಲಾಗಿದೆ. ಬಾಲ್ಯವಿವಾಹ, ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯದಂತಹ ಈ ಎಲ್ಲಾ ಸಾಮಾಜಿಕ ಪಿಡುಗುಗಳಿಂದ ಮಕ್ಕಳನ್ನು ರಕ್ಷಿಸಲು ಹಾಗೂ ಮಕ್ಕಳಿಗೆ ಸುರಕ್ಷಿತವಾದ ವಾತಾವರಣವನ್ನು ಕಲ್ಪಿಸಲು ಬಾಲ್ಯವಿವಾಹ ನಿಷೇಧ ಮತ್ತು ತಿದ್ದುಪಡಿ ಕಾಯ್ದೆ, ಪೋಕ್ಸೊ ಕಾಯ್ದೆ ಹಾಗೂ ಮಕ್ಕಳ ಪರವಾದ ಕಾನೂನುಗಳ ಕುರಿತು ಮತ್ತಷ್ಟು ವ್ಯಾಪಕವಾದ ಜಾಗೃತಿಯನ್ನು ಮೂಡಿಸಬೇಕು ಎಂದು ಹೇಳಿದರು. ಗಂಗಾವತಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ಜಯಶ್ರೀ ಅವರು ಮಾತನಾಡಿ, ಇಲಾಖೆಯಡಿ ಹದಿಹರೆಯದ ಕಿಶೋರಿಯವರಿಗೆ ಲಭ್ಯವಿರುವ ಯೋಜನೆಗಳ ಸದುಪಯೋಗ ಪಡೆದು, ಬಾಲಕಿಯರು ಬಾಲ್ಯವಿವಾಹಕ್ಕೆ ಒಳಗಾಗದಂತೆ ಸ್ವಯಂ ರಕ್ಷಣೆಯನ್ನು ಪಡೆದುಕೊಳ್ಳಲು ಸರ್ಕಾರದ ಬೆಂಬಲವನ್ನು ಪಡೆಯುವಂತೆ ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜಿಕಾ ಕಾರ್ಯಕರ್ತೆ ಪ್ರತಿಭಾ ಕಾಶಿಮಠ ಅವರು ಮಾತನಾಡಿ, ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಗರ್ಭಿಣಿಯರಾಗಿರುವ ಪ್ರಕರಣಗಳು ವರದಿಯಾಗಿವೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012 ತಿದ್ದುಪಡಿ-2019 ರನ್ವಯ ಮಕ್ಕಳ ಮೇಲಿನ ಲೈಂಗಿಕ ಹಲ್ಲೆ, ದೌರ್ಜನ್ಯಗಳಿಗೆ ಕನಿಷ್ಠ 20 ವರ್ಷಗಳಿಂದ ಜೀವಾವಧಿ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ. ಈ ರೀತಿಯಲ್ಲಿ ಶಿಕ್ಷೆ ವಿಧಿಸಿದ ಪ್ರಕರಣಗಳು ಸಹ ಜಿಲ್ಲೆಯಲ್ಲಿ ವರದಿಯಾಗಿವೆ. ಯುವಕರು ಈ ಕಾಯ್ದೆಯ ಕುರಿತು ಹೆಚ್ಚಿನ ಅರಿವು ಪಡೆದು ಸುರಕ್ಷತಾ ಜೀವನವನ್ನು ನಡೆಸುವಂತೆ ಹಾಗೂ ಬಾಲಕಿಯರು ಯಾವುದೇ ಆಸೆ ಆಮೀಷಗಳಿಗೆ ಒಳಗಾಗದೇ ಸುರಕ್ಷಿತವಾಗಿರುವಂತೆ ಮತ್ತು ಅಪ್ರಾಪ್ತ ವಯಸ್ಸಿನಲ್ಲಿ ವಿವಾಹವಾಗಬೇಡಿ ಎಂದು ತಿಳಿಸಿದರು.
ಶ್ರೀ ಕೊಟ್ಟೂರೇಶ್ವರ ಸಂಯುಕ್ತಾ ಪದವಿ ಪೂರ್ವ ಕಾಲೇಜಿನ ಪ್ರಾಶುಂಪಾಲರಾದ ರವಿ ಚೌಹಾಣ ಅವರು ಮತನಾಡಿ, ಕಾಯ್ದೆ-ಕಾನೂನುಗಳು ನಿಮ್ಮ ಸುರಕ್ಷತೆಗಾಗಿದ್ದು, ಅವುಗಳನ್ನು ಅರಿತು ಸಮರ್ಕವಾಗಿ ಬಳಸಿಕೊಂಡು ಉತ್ತಮ ಸಮಾಜ ನಿರ್ಮಾತೃಗಳಾಗುವಂತೆ ಹೇಳಿದರು.ಈ ಸಂದರ್ಭದಲ್ಲಿ ಕಲ್ಮಠ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಶುಂಪಾಲರಾದ ವೆಂಕನಗೌಡ, ಗಂಗಾವತಿಯ ಪಿಬಿಇ್ಘ ಆರ್.ಡಿ ಟ್ರಸ್ಟ್ ಅಧ್ಯಕ್ಷರಾದ ಮಲ್ಲಿಕಾರ್ಜುನಗೌಡ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಯಮನಮ್ಮ, ಕಾರ್ಯಕ್ರಮ ಸಂಯೋಜಕ ಶರಣಪ್ಪ ಸಿಂಗನಾಳ, ವಿಷಯ ನಿರ್ವಾಹಕಿ ಬಸವಣ್ಣೆಮ್ಮ, ಮಕ್ಕಳ ಸಹಾಯವಾಣಿ-1098 ಸಿಬ್ಬಂದಿಗಳು ಉಪಸ್ಥಿತರಿದ್ದರು. ಭಾಗ್ಯಲಕ್ಷ್ಮೀ ನಿರೂಪಿಸಿದರು. ಕಾಲೇಜಿನ ಒಟ್ಟು 400 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ದತ್ತು ಮಾಸಾಚರಣೆಯ ಹಿನ್ನಲೆ ಕುರಿತು ದತ್ತು ಸಂಕಲ್ಪ ಸಂದೇಶವನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಬೋಧಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 