ಬೆಂಗಳೂರು, ಮೇ 5,ಜೂನ್ ಎರಡನೇ ಅಥವಾ ಮೂರನೇ ವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಂಗಳವಾರ ಫೇಸ್ಬುಕ್ ಲೈವ್ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮತ್ತು ಪೋಷಕರನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಆತಂಕಕ್ಕೊಳಗಾಗುವುದು ಬೇಡ. ವ್ಯವಸ್ಥಿತ ಹಾಗೂ ಸುರಕ್ಷಿತ ಪರೀಕ್ಷೆ ನಡೆಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಭರವಸೆ ನೀಡಿದರು. ಪರಿಸ್ಥಿತಿ ನೋಡಿಕೊಂಡು 20 ಅಥವಾ 30 ದಿನಗಳ ಒಳಗೆ ವೇಳಾಪಟ್ಟಿ ಪ್ರಕಟಿಸಲಾಗುವುದು. ಈ ವೇಳಾಪಟ್ಟಿ ಬಿಡುಗಡೆಯಾದ ದಿನ ಮತ್ತು ಪರೀಕ್ಷೆ ನಡೆಸುವ ದಿನಾಂಕದ ನಡುವೆ ಕನಿಷ್ಠ 15 ದಿನ ಅಂತರ ಇರುವಂತೆ ನೋಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.