ಬೆಂಗಳೂರು,ಜ 16(ಯುಎನ್‌ಐ) ಬಹು ಚರ್ಚಿತ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ನೀಡಲು ನಿರ್ಧರಿಸಿದ್ದು, ಈ ಕುರಿತು ಸದ್ಯದಲ್ಲಿಯೇ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಸಿವೆ.
ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷದ ನಾಯಕನ ಸ್ಥಾನದಲ್ಲಿಯೇ ಮುಂದುವರೆಸಲು ನಿರ್ಧರಿಸಿದೆ. ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಥವಾ ಎಂ.ಬಿ.ಪಾಟೀಲ್ ಅವರಲ್ಲಿ ಒಬ್ಬರಿಗೆ ನೀಡಲು ಎಐಸಿಸಿ ಮನಸು ಮಾಡಿದೆ.
ಹಿರಿಯ ನಾಯಕ ಜಿ. ಪರಮೇಶ್ವರ್ ಶಾಸಕಾಂಗ ಪಕ್ಷದ ನಾಯಕರಾದರೆ, ಎಂ.ಬಿ.ಪಾಟೀಲ್ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಥವಾ ಸಿಡಬ್ಲುಸಿ ಸದಸ್ಯ ಹುದ್ದೆಗೆ ಪರಿಗಣಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ.
ಡಿ.ಕೆ.ಶಿವಕುಮಾರ್ ಅವರ ನೇಮಕಕ್ಕೆ ಸಿದ್ದರಾಮಯ್ಯ ಬಣದಿಂದ ಸಾಕಷ್ಟು ವಿರೋಧ ವ್ಯಕ್ತವಾಗಿದ್ದರೂ, ಹೈಕಮಾಂಡ್ ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿಕೊಂಡು ಹೋಗುವುದರ ಜೊತೆಗೆ ಜೆಡಿಎಸ್ ಜೊತೆಗೂ ಉತ್ತಮ ಸಂಬಂಧ ಇಟ್ಟುಕೊಂಡು ಹೋಗುವ ಅಗತ್ಯತೆ ಇದೆ ಎನ್ನುವ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಉತ್ತರ ಕರ್ನಾಟಕ ಭಾಗದ ಲಿಂಗಾಯತ ಸಮುದಾಯವನ್ನು ಸೆಳೆಯಲು ಎಂ.ಬಿ.ಪಾಟೀಲ್ ಅವರಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂಬ ಸಿದ್ದರಾಮಯ್ಯ ಅವರ ವಾದಕ್ಕೆ ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕರಾಗಿರುವ ಬಿ.ಎಸ್.ಯಡಿಯೂರಪ್ಪ ಅಧಿಕಾರದಲ್ಲಿರುವಾಗ ಅದೇ ಸಮುದಾಯದ ನಾಯಕನನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ ತಕ್ಷಣವೇ ಆ ಸಮುದಾಯವನ್ನು ಪಕ್ಷಕ್ಕೆ ಸೆಳೆಯುವುದು ಕಷ್ಟ ಎಂಬ ಅಭಿಪ್ರಾಯವನ್ನು ಹೈಕಮಾಂಡ್ ನಾಯಕರು ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಈಗ ಎಂ.ಬಿ.ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅವರನ್ನು ಹುದ್ದೆಯಿಂದ ಕೆಳಗಿಳಿಸುವುದು ಕಷ್ಟವಾಗುತ್ತದೆ ಎನ್ನುವ ಕಾರಣಕ್ಕೆ ಹೈಕಮಾಂಡ್ ಡಿ.ಕೆ.ಶಿವಕುಮಾರ್ ಆಯ್ಕೆಗೆ ಆದ್ಯತೆ ನೀಡಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಡಿ.ಕೆ.ಶಿವಕುಮಾರ್ ಆಯ್ಕೆಯಾದರೆ ಮೂಲ ಕಾಂಗ್ರೆಸ್ಸಿಗರ ಬೇಡಿಕೆಗೆ ಹೈಕಮಾಂಡ್ ಮನ್ನಣೆ ನೀಡಿದಂತಾಗುತ್ತದೆ. ಈ ಮೂಲಕ ರಾಜ್ಯ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಅವರ ಏಕಪಕ್ಷೀಯ ನಿರ್ಧಾರಗಳಿಗೆ ತಡೆಯೊಡ್ಡಿದಂತಾಗುತ್ತದೆ ಹಾಗೂ ಸಿದ್ದರಾಮಯ್ಯ ರಾಜ್ಯದಲ್ಲಿ ಪಕ್ಷದ ಮೇಲೆ ಸಾಧಿಸಿರುವ ಹಿಡಿತವನ್ನು ಸಡಿಲಗೊಳಿಸಿದಂತಾಗುತ್ತದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ.
ಕಾರ್ಯಾಧ್ಯಕ್ಷರ ನೇಮಕ ಗೊಂದಲ:
ಕೆಪಿಸಿಸಿಗೆ ಯಾರನ್ನೇ ಅಧ್ಯಕ್ಷರನ್ನಾಗಿ ನೇಮಿಸಿದರೂ, ವಿಭಾಗವಾರು ಕಾರ್ಯಾಧ್ಯಕ್ಷರ ನೇಮಕ ಮಾಡಲು ಕಾಂಗ್ರೆಸ್ ಹೈಕಮಾಂಡ್ ಆಸಕ್ತಿ ತೋರಿದೆ ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಕೂಡ ಕಾರ್ಯಾಧ್ಯಕ್ಷ ನೇಮಕ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ ಎನ್ನಲಾಗುತ್ತಿದೆ.
ಆದರೆ, ಕೆಪಿಸಿಸಿ ಅಧ್ಯಕ್ಷರಾಗುವ ಭರವಸೆ ಹೊಂದಿರುವ ಡಿ.ಕೆ.ಶಿವಕುಮಾರ್ ಕಾರ್ಯಾಧ್ಯಕ್ಷರ ನೇಮಕ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ತಾವು ಅಧ್ಯಕ್ಷರಾದರೆ, ವಿಭಾಗವಾರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡುವ ಮೂಲಕ ತಮ್ಮ ಅಧಿಕಾರವನ್ನು ಮೊಟಕುಗೊಳಿಸುವ ತಂತ್ರ ಇದಾಗಿದೆ ಎಂದು ಕಾರ್ಯಾಧ್ಯಕ್ಷರ ಹುದ್ದೆ ನೇಮಕಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಾರ್ಯಾಧ್ಯಕ್ಷರ ಬದಲು ವಿಭಾಗವಾರು ಉಪಾಧ್ಯಕ್ಷರನ್ನು ನೇಮಿಸುವಂತೆ ಡಿ.ಕೆ.ಶಿವಕುಮಾರ್ ಹೈಕಮಾಂಡ್ ನಾಯಕರಿಗೆ ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಆದರೆ, ತಾವು ಸೂಚಿಸಿದವರಿಗೆ ಅಧ್ಯಕ್ಷ ಸ್ಥಾನ ದೊರೆಯದಿರುವುದರಿಂದ ಸಿದ್ದರಾಮಯ್ಯ ನಾಲ್ಕು ವಿಭಾಗಗಳಿಗೂ ಜಾತಿ ಆಧಾರದಲ್ಲಿ ಕಾರ್ಯಾಧ್ಯಕ್ಷರನ್ನು ನೇಮಿಸುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅದೇ ಕಾರಣಕ್ಕೆ ಹೈಕಮಾಂಡ್ ಮಟ್ಟದಲ್ಲಿ ಇನ್ನೂ ಗೊಂದಲ ಮುಂದುವರೆದಿದೆ ಎಂದು ಹೇಳಲಾಗುತ್ತಿದೆ.
ಒಂದು ವೇಳೆ, ಡಿ.ಕೆ.ಶಿವಕುಮಾರ್ ಒತ್ತಡಕ್ಕೆ ಮಣಿದು ಹೈಕಮಾಂಡ್ ನೂತನ ಕಾರ್ಯಾಧ್ಯಕ್ಷರ ನೇಮಕ ಮಾಡಲು ಹಿಂದೇಟು ಹಾಕಿದರೂ, ಹಾಲಿ ಇರುವ ಈಶ್ವರ್ ಖಂಡ್ರೆ ಅವರನ್ನು ಕಾರ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂಬ ಆತಂಕ ಕಾಂಗ್ರೆಸ್ ನಾಯಕರಲ್ಲಿ ಮೂಡಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಕಾರ್ಯಾಧ್ಯಕ್ಷರ ಸ್ಥಾನಕ್ಕೆ ಹೊಸ ನೇಮಕ ಮಾಡದಿದ್ದರೂ, ಜಾತಿ ಹಾಗೂ ಪ್ರಾದೇಶಿಕ ಲೆಕ್ಕಾಚಾರದಲ್ಲಿ ಹಾಲಿ ಇರುವ ಈಶ್ವರ್ ಖಂಡ್ರೆ ಅವರನ್ನು ಅದೇ ಹುದ್ದೆಯಲ್ಲಿ ಮುಂದುವರೆಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿಂದು ಪ್ರತಿಕ್ರಿಯಿಸಿ, ಅಧ್ಯಕ್ಷರ ನೇಮಕದಲ್ಲಿ ಯಾವುದೇ ಗೊಂದಲವಿಲ್ಲ. ಹೈಕಮಾಂಡ್ ಆದಷ್ಟು ಬೇಗ ಗೊಂದಲಗಳಿಗೆ ತೆರೆ ಎಳೆಯಬೇಕು. ಪಕ್ಷದಲ್ಲಿ ಮೂಲ ವಲಸಿಗರು ಎಂಬ ಭೇದವಿಲ್ಲ. ಕೆಲವರು ಆರೋಪ ಮಾಡಲು ಯಾವುದೇ ವಿಷಯ ಸಿಗದಿರುವಾಗ ಈ ರೀತಿಯ ಗೊಂದಲ ಸೃಷ್ಠಿಸುವ ಪ್ರಯತ್ನ ಮಾಡುತ್ತಾರೆ. ಪಕ್ಷಕ್ಕೆ ಬಂದ ಮೇಲೆ ಎಲ್ಲರೂ ಕಾಂಗ್ರೆಸ್ಸಿಗರೆ ಎಂದು ಖಡಕ್ ಆಗಿ ಹೇಳಿದ್ದಾರೆ.
ಹಿರಿಯ ನಾಯಕ ಕೆ.ಹೆಚ್.ಮುನಿಯಪ್ಪ ಪ್ರತಿಕ್ರಿಯಿಸಿ, ನಮ್ಮದು ರಾಷ್ಟ್ರೀಯ ಪಕ್ಷ ಇಲ್ಲಿ ಭಿನ್ನಾಭಿಪ್ರಾಯ ಇರುವುದು ಸಹಜ. ಅಧ್ಯಕ್ಷರ ಆಯ್ಕೆ ಕುರಿತು ಹೈಕಮಾಂಡ್ ಎಲ್ಲರ ಅಭಿಪ್ರಾಯ ಪಡೆದುಕೊಂಡಿದೆ. ವಾಸ್ತವಾಂಶ ಯಾರಿಗೂ ಗೊತ್ತಿಲ್ಲ. ಯಾರಿಗೇ ಅಧ್ಯಕ್ಷ ಸ್ಥಾನ ನೀಡಿದರೂ ತಾವೆಲ್ಲರೂ ಒಟ್ಟಾಗಿ ಕೆಲಸ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ.