ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿ ವೀಕ್ಷಿಸಿದ ಕಾಗೇರಿ

ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿ ವೀಕ್ಷಿಸಿದ ಕಾಗೇರಿ  Kageri inspects Ayushman Arogya Kendra work


ನೇಸರಗಿ 29: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಮತ್ತು ಆರೋಗ್ಯ ಸೇವೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.  

ಸುತ್ತಗಟ್ಟಿ ಗ್ರಾಮದಲ್ಲಿ ?55 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿ ಮಾತನಾಡಿದ ಅವರು, ಗ್ರಾಮೀಣ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ ಎಂದರು.  

ಕಿತ್ತೂರು ಕ್ಷೇತ್ರದಲ್ಲಿ 33 ಆಯುಷ್ಮಾನ್ ಆರೋಗ್ಯ ಕೇಂದ್ರಗಳಿಗೆ ಮಂಜೂರಾತಿ ದೊರೆತಿದ್ದು, ಈ ಯೋಜನೆಗೆ ಕೇಂದ್ರ ಸರ್ಕಾರ ಶೇ.60 ಹಾಗೂ ರಾಜ್ಯ ಸರ್ಕಾರ ಶೇ.40 ಅನುದಾನ ನೀಡುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಜನರಿಗೆ ಅದರ ಪ್ರಯೋಜನ ತಲುಪಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.  

ಕಾರ್ಯಕ್ರಮದಲ್ಲಿ ಅಂಗನವಾಡಿ ಮಕ್ಕಳೊಂದಿಗೆ ಸಂವಾದ ನಡೆಸಿ, ಸಿಹಿ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ, ಬಿಜೆಪಿ ಕಿತ್ತೂರು ಮಂಡಳ ಅಧ್ಯಕ್ಷ ಶ್ರೀಕರ ಕುಲಕರ್ಣಿ, ಮುಖಂಡರಾದ ಲಕ್ಷ್ಮೀ ಇನಾಮದಾರ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.  

ಇನಾಮದಾರ ಫೌಂಡೇಶನ್ ವತಿಯಿಂದ ಅಂಗನವಾಡಿ ವಿದ್ಯಾರ್ಥಿಗಳಿಗೆ ಕಲರ್ ಪೆನ್ಸಿಲ್ ಹಾಗೂ ಸಿಹಿ ವಿತರಿಸಲಾಯಿತು. ಕಾರ್ಯಕ್ರಮವನ್ನು ಬಿಜೆಪಿ ಮುಖಂಡ ಸಿದ್ದು ಬೋಳಣ್ಣವರ ನೆರವೇರಿಸಿದರು.