ಬೆಂಗಳೂರು, ಜ. 8: ರಾಜ್ಯದಲ್ಲಿ ಕೂಡಲೇ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ, ಅನೇಕ ಕನ್ನಡ ಪರ ಸಂಘಟನೆಗಳು ಫೆ.13ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಅಧ್ಯಕ್ಷ ನಾಗೇಶ್ ಮಾತನಾಡಿ, ರಾಜ್ಯದಲ್ಲಿ ಕನ್ನಡಿಗರೇ ಪರಭಾಷಿಗರಂತಾಗಿದ್ದಾರೆ. ಇಂದು ಕನ್ನಡ ಮಾತನಾಡುವುದೇ ಅವಮಾನವೆಂಬಂತಾಗಿದೆ. ರಾಜ್ಯದಲ್ಲಿ ಮಾತೃ ಭಾಷೆಯಲ್ಲಿ ಶಿಕ್ಷಣ ಪಡೆದರೂ ಕರ್ನಾಟಕದವರಿಗೆ ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗುವ ಪರಿಸ್ಥಿತಿ ಎದುರಾಗದೆ. ಹಾಗಾಗಿ ಸರ್ಕಾರ ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಿ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಆಗ್ರಹಿಸಿದರು.
ಈಗಾಗಲೇ 96 ದಿನದಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಗಮನ ಹರಿಸಿಲ್ಲ. ಆದ್ದರಿಂದ ನೂರನೇ ದಿನದ ಹೋರಾಟ ದಂದು ಕರ್ನಾಟಕ ಬಂದ್ ಗೆ ಕರೆ ನೀಡಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರ ಕೇವಲ ಭರವಸೆ ನೀಡದೆ ಅದನ್ನು ಕಾರ್ಯರೂಪಕ್ಕೆ ತರಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಬಂದ್ ಗೆ 400 ಕ್ಕೂ ಹೆಚ್ಚು ಸಂಘಟನೆಗಳು ಸಹಕಾರ ನೀಡಿದ್ದು, ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಬಂದ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಟೌನ್ ಹಾಲ್ ನಿಂದ ಫ್ರೀಡಂಪಾರ್ಕ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಜೊತೆಗೆ ಬಿಎಂಟಿಸಿ, ಆಟೋ ಚಾಲಕರು ಮತ್ತು ಓಲಾ ಊಬರ್ ಚಾಲಕರ ಸಂಘಟನೆಗಳು ಸಹ ಬಂದ್ ಗೆ ಬೆಂಬಲ ಸೂಚಿಸಿವೆ. ಜೊತೆಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರ್ವಜನಿಕ ರಜೆ ನೀಡಬೇಕೆಂದು ಮನವಿ ಮಾಡಲಾಗಿದೆ ಎಂದು ಹೇಳಿದರು.