ನವದೆಹಲಿ, ಫೆ 10 : ನಗರದ ಹೆಣ್ಣುಮಕ್ಕಳೊಂದಿಗೆ ಕೆಟ್ಟದಾಗಿ ವರ್ತಿಸಿರುವುದು ಅತ್ಯಂತ ದುರದೃಷ್ಟಕರ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳುವಂತಾಗಲು ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.
" ಗರ್ಗಿ ಕಾಲೇಜಿನಲ್ಲಿ ನಮ್ಮ ಹೆಣ್ಣುಮಕ್ಕಳೊಂದಿಗೆ ಕೆಟ್ಟದಾಗಿ ವರ್ತಿಸಿರುವುದು ಅತ್ಯಂತ ದುರದೃಷ್ಟಕರ ಮತ್ತು ನಿರಾಶಾದಾಯಕವಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ನಮ್ಮ ಕಾಲೇಜುಗಳಲ್ಲಿ ಓದುತ್ತಿರುವ ಮಕ್ಕಳು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು" ಎಂದು ಅರವಿಂದ ಕೇಜ್ರಿವಾಲ್ ಟ್ವೀಟ್ ಮಾಡಿ ಘಟನೆಯ ಬಗ್ಗೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಫೆಬ್ರವರಿ 6 ರಂದು ನಡೆದ ಘಟನೆ ಸಂಬಂಧ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಹೌಜ್ ಖಾಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ಘಟನೆಯ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ಕೂಡ ತಂಡವೊಂದನ್ನು ಕಾಲೇಜಿಗೆ ಕಳುಹಿಸಿದೆ.
ಮಾಧ್ಯಮ ವರದಿಗಳ ಪ್ರಕಾರ, ಗರ್ಗಿ ಕಾಲೇಜಿನಲ್ಲಿ ಶುಕ್ರವಾರ ನಡೆದ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮ 'ರೆವೆರಿ' ಸಮಾರಂಭದ ವೇಳೆ ಬಲವಂತವಾಗಿ ಕ್ಯಾಂಪಸ್‌ಗೆ ಪ್ರವೇಶಿಸಿದ ಕೆಲವು ಅಪರಿಚಿತ ಪುರುಷರು ಕಾಲೇಜಿನ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದರು. ತಮ್ಮ ಸಹಾಯಕ್ಕೆ ಕಾಲೇಜಿನವರು ಬಂದಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು.
ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಾಲಿವಾಲ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆ ನಡೆದು ನಾಲ್ಕು ದಿನಗಳಾದರೂ ದೆಹಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದ್ದಾರೆ.
ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ (ಎಎಪಿ) ಮಹಿಳೆಯರ ಸುರಕ್ಷತೆಯನ್ನು ಅದರ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದೆ.
ಮುಖ್ಯಮಂತ್ರಿಯವರ 'ಟೆನ್ ಗ್ಯಾರಂಟಿ ಕಾರ್ಡ್' ಯೋಜನೆಯಡಿಯಲ್ಲಿ, ಬಸ್ ಮಾರ್ಷಲ್‌ಗಳ ಮಾದರಿಯಲ್ಲಿ, ನಗರದಲ್ಲಿ ಮೊಹಲ್ಲಾ ಮಾರ್ಷಲ್‌ಗಳನ್ನು ನಿಯೋಜಿಸಲಾಗುವುದು ಎಂದು ಘೋಷಿಸಲಾಗಿದೆ.