ಬೆಳಗಾವಿ, ಏ.೧೯, ಕೋವಿಡ್-೧೯ ಹಿನ್ನೆಲೆಯಲ್ಲಿ ಘೋಷಿಸಲಾಗಿರುವ ಲಾಕ್ ಡೌನ್, ರಂಜಾನ್ ಮಾಸ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆರೋಗ್ಯ ಮತ್ತು ಪೊಲೀಸ್ ಇಲಾಖೆಯ ಜತೆ ಸಹಕರಿಸಬೇಕು ಎಂದು ಅಲ್ಪಸಂಖ್ಯಾತ ಸಮುದಾಯದ ಮುಖಂಡರಿಗೆ ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಮನವಿ ಮಾಡಿಕೊಂಡರು.
ನಗರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ತಬ್ಲಿಘಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದವರು ಹಾಗೂ ಅವರೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರಲ್ಲಿ ಸೋಂಕು ಕಂಡುಬಂದಿರುವುದರಿಂದ ಅವರನ್ನು ಕ್ವಾರಂಟೈನ್ ಕೇಂದ್ರಗಳಲ್ಲಿ ಇರಿಸಲಾಗಿದೆ. ಕ್ವಾರಂಟೈನ್ ನಲ್ಲಿ ಇದ್ದವರು ನಿಗದಿತ ಅವಧಿ ಪೂರ್ಣಗೊಳ್ಳುವವರೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ವೈದ್ಯರು ಮತ್ತು ಸಿಬ್ಬಂದಿ ಜತೆ ಸಹಕರಿಸುವಂತೆ ತಿಳಿವಳಿಕೆ ನೀಡಬೇಕು ಎಂದು ಸಮಾಜದ ಮುಖಂಡರಿಗೆ ಮನವಿ ಮಾಡಿದರು.ಪವಿತ್ರ ರಮ್ಜಾನ್ ಮಾಸದ ಹಿನ್ನೆಲೆಯಲ್ಲಿ ಸಮಾಜ ಜನರು ತಮ್ಮ ತಮ್ಮ ಮನೆಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಕೋವಿಡ್-೧೯ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು. ಈ ನಿಟ್ಟಿನಲ್ಲಿ ಸಮಾಜದ ಜನರಿಗೆ ಮನವರಿಕೆ ಮಾಡಬೇಕು. ಸರ್ಕಾರದ ನಿರ್ದೇಶನದಂತೆ ಪೊಲೀಸರು ಲಾಕ್ ಡೌನ್ ಸಂದರ್ಭದಲ್ಲಿ ಜನಸಂಚಾರ ನಿರ್ಬಂಧಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಪೊಲೀಸರ ಜತೆ ಎಲ್ಲರೂ ಸಹಕರಿಸಬೇಕು ಎಂದರು.ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ನಿಷೇಧಿತ ಪ್ರದೇಶ ಎಂದು ಘೋಷಿಸಿರುವ ಕಡೆಗಳಲ್ಲಿ ದಿನಸಿ, ತರಕಾರಿ ಮತ್ತು ತುರ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು. ಸಾರ್ವಜನಿಕರು ಅನವಶ್ಯಕವಾಗಿ ಹೊರಗೆ ಬರಬಾರದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಲ್ಪಸಂಖ್ಯಾತ ಸಮಾಜದ ಮುಖಂಡರು, ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಸಹಕಾರ ನೀಡುವಂತೆ ಜನರಿಗೆ ಮನವರಿಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ್ ಪಠಾಣ, ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.