ಮಾ.19ರಂದು ದುಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಮಂಗಳೂರಿಗೆ ಬಂದಿದ್ದ ಭಟ್ಕಳದ ಯುವಕನಲ್ಲಿ ಮಾ.22ರಂದು ಕೊರೋನ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆತ 14 ದಿನಗಳ ನಿಗಾ ಅವಧಿ ಪೂರೈಸಿದ್ದು, ಗುಣಮುಖನಾಗಿದ್ದಾರೆ. ಆತನ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಎ.2 ಮತ್ತು 3ರಂದು ಹೀಗೆ ಮತ್ತೆ ಎರಡು ಬಾರಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ಆತನ ದ್ರವದ ಮಾದರಿಯ ವರದಿಯು ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಎ.6ರಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದವರು ಮಾಹಿತಿ ನೀಡಿದ್ದಾರೆ.