ಮಂಗಳೂರು, ಏ.29, ಜಮೀನಿನ ವಿವಾದದ ಹಿನ್ನೆಲೆಯಲ್ಲಿ ಲಾಕ್‌ಡೌನ್ ಸಂದರ್ಭದಲ್ಲಿ ಹಾಡಹಗಲೇ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಲ್ಲಿನ ಹೊರವಲಯ ಕಿನ್ನಿಗೋಳಿ ಏಳಿಂಜೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.ಮೃತರನ್ನು ವಿನ್ಸೆಂಟ್ ಡಿಸೋಜ (48) ಮತ್ತು ಅವರ ಪತ್ನಿ ಹೆಲಿನ್ ಡಿಸೋಜ (43) ಎಂದು ಗುರುತಿಸಲಾಗಿದೆ. ಆರೋಪಿ ನೆರೆ ಮನೆಯ ಅಲ್ಫನ್ಸ್ ಸಲ್ಡಾನ (51) ನನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.ಜಮೀನಿನ ವಿವಾದದ ಹಿನ್ನೆಲೆಯಲ್ಲಿ ದಂಪತಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.ಮನೆ ಪಕ್ಕದ ಜಾಗದ ತಕರಾರಿನ ಹಿನ್ನೆಲೆಯಲ್ಲಿ ಆರೋಪಿ ಅಲ್ಫನ್ಸ್ ಸಲ್ಡಾನ ಪಿಕ್ಕಾಸು ಹಾಗೂ ಹಾರೆಯಿಂದ ದಂಪತಿಗೆ ಗಂಭೀರವಾಗಿ ಹಲ್ಲೆ ಮಾಡಿ ಮನೆ ಮುಂಭಾಗದಲ್ಲೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಘಟನಾ ಸ್ಥಳಕ್ಕೆ ಮುಲ್ಕಿ ಪೊಲೀಸರ ಭೇಟಿ ನೀಡಿದ್ದು, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.