‘ಪ್ರಜಾಸೇವೆ ಆಂದೋಲನ’ಕ್ಕೆ ಚಾಲನೆ: ಶಾಸಕ ಎಫ್‌.ಸಿ. ಅಣ್ಣಪೂರ್ಣ

‘ಪ್ರಜಾಸೇವೆ ಆಂದೋಲನ’ಕ್ಕೆ ಚಾಲನೆ: ಶಾಸಕ ಎಫ್‌.ಸಿ. ಅಣ್ಣಪೂರ್ಣ  Launch of 'Prajaseva Andolan': MLA F.C. Annapurna

ಲೋಕದರ್ಶನ ವರದಿ 

ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ  

ಬಳ್ಳಾರಿ, ಸೆ.19 (ಕರ್ನಾಟಕ ವಾರ್ತೆ): ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳನ್ನು ನೇರವಾಗಿ ಜನರ ಮನೆಬಾಗಿಲಿಗೆ ತಲುಪಿಸುವ ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಸಂಡೂರು ತಾಲ್ಲೂಕಿನ ವಿಠಲಾಪುರ ಗ್ರಾಮದಲ್ಲಿ ತಾಲ್ಲೂಕು ಮಟ್ಟದ ‘ಪ್ರಜಾಸೇವೆ ಆಂದೋಲನ’ ಕಾರ್ಯಕ್ರಮ ನಡೆಯಿತು.  ತೋರಣಗಲ್ಲು ಹೋಬಳಿ ವ್ಯಾಪ್ತಿಯ ವಿಠಲಾಪುರದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಂಡೂರು ಶಾಸಕ ಎಫ್‌.ಸಿ. ಅಣ್ಣಪೂರ್ಣ ಚಾಲನೆ ನೀಡಿದರು.  

ನಂತರ ಮಾತನಾಡಿದ ಅವರು, ಸರ್ಕಾರ ಮತ್ತು ಸಾರ್ವಜನಿಕರ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ‘ಪ್ರಜಾಸೇವೆ ಆಂದೋಲನ’ ಆರಂಭಿಸಲಾಗಿದೆ. ಮಾಹಿತಿಯ ಕೊರತೆಯಿಂದ ಅರ್ಹ ಫಲಾನುಭವಿಗಳು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ.

ಸಾರ್ವಜನಿಕರ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರುವಲ್ಲಿ ತೊಂದರೆ ಎದುರಾಗುವವರಿಗೆ ನೆರವಾಗಲು ಹಾಗೂ ನಾಗರಿಕರೊಂದಿಗೆ ನೇರ ಸಂಪರ್ಕ ಸಾಧಿಸಲು ಈ ಆಂದೋಲನ ಪರಿಣಾಮಕಾರಿ ವೇದಿಕೆಯಾಗಿದೆ ಎಂದು ಹೇಳಿದರು.  

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಶೀಘ್ರ ಪರಿಹರಿಸುವುದೇ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಹಾಜರಿದ್ದು, ಜನರ ಅಹವಾಲುಗಳನ್ನು ಸ್ವೀಕರಿಸಿ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು.  

ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳು ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ವಿಠಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನೂರಾರು ಸಾರ್ವಜನಿಕರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಶಾಸಕ ಹಾಗೂ ಅಧಿಕಾರಿಗಳ ಮುಂದಿಟ್ಟರು.  

ವಿವಿಧ ಇಲಾಖೆಗಳ ಪ್ರತ್ಯೇಕ ಕೌಂಟರ್ಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರಿಗೆ ಯೋಜನೆಗಳು, ಸೌಲಭ್ಯಗಳು ಹಾಗೂ ಅರ್ಜಿ ಸಲ್ಲಿಕೆ ಕುರಿತು ಮಾಹಿತಿ ನೀಡಲಾಯಿತು. ಸ್ಥಳದಲ್ಲೇ ಅಹವಾಲುಗಳನ್ನು ಸ್ವೀಕರಿಸಿ ಹಲವು ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣವೇ ಪರಿಹಾರ ಒದಗಿಸಿದರು.  

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಹಾರಿಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ರಜುಬೇರ್, ಸಹಾಯಕ ಆಯುಕ್ತ ರಾಜೇಶ್ ಎಚ್‌.ಡಿ., ಸಂಡೂರು ತಹಶೀಲ್ದಾರ್ ಜಿ. ಅನಿಲ್ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.