ಶೀಘ್ರದಲ್ಲೇ ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆಯಿಂದ ಸಾಲ; ಸಚಿವ ಎಸ್ ಟಿ ಸೋಮಶೇಖರ್

ದಾವಣಗೆರೆ, ಜೂ 12,ಶೀಘ್ರದಲ್ಲಿ ಆಶಾ ಕಾರ್ಯಕರ್ತೆಯರಿಗೂ ಸಹಕಾರ ಇಲಾಖೆ ವತಿಯಿಂದ ಸಾಲ ಕೊಡಿಸುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.ಕೋವಿಡ್ -19 ವಿರುದ್ಧ ಹೋರಾಡಿದ ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ ತಲಾ 3 ಸಾವಿರ ರೂಪಾಯಿ ಸಹಾಯಧನ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಹ ಚರ್ಚಿಸಲಾಗಿದೆ ಎಂದು ಕೊರೋನಾ ಸಂಕಷ್ಟದ ಸಮಯದಲ್ಲಿ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ಸಹಕಾರ ಇಲಾಖೆಯಿಂದ 53 ಕೋಟಿ ರೂ.ಗಳನ್ನು ಸಂಗ್ರಹಿಸಿ ನೀಡಿದ್ದೇವೆ. ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಕೊಡುವ ವಿಚಾರದಲ್ಲೂ ಮುಖ್ಯಮಂತ್ರಿಗಳಿಗೆ ಸಹಕಾರ ನೀಡಿದ್ದೇವೆ ಎಂದರು. 

ರಾಜ್ಯದಲ್ಲಿರುವ 42 ಸಾವಿರ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂಪಾಯಿಯಂತೆ ಪ್ರೋತ್ಸಾಹ ಧನ ನೀಡಲು 12.7 ಕೋಟಿ ರೂ.ಗಳ ಅಗತ್ಯವಿದೆ. ಅದನ್ನು ಸಹಕಾರ ಇಲಾಯೇ ಭರಿಸುತ್ತಿದೆ. ಹಣ ತಲುಪದವರು ಅದನ್ನು ಸಹಕಾರ ಇಲಾಖೆಯ ಡೆಪ್ಯುಟಿ ರಿಜಿಸ್ಟರ್ ಗಮನಕ್ಕೆ ತನ್ನಿ ಎಂದು ಸಚಿವರು ತಿಳಿಸಿದರು.

ಬಡ ವರ್ಗದವರಿಗೆ ಬಡವರ ಬಂಧು ಇಲ್ಲವೇ ಸ್ತ್ರೀ ಶಕ್ತಿ ಸಂಘಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ಇದರಿಂದ ಅವರ ಆರ್ಥಿಕ ಸಬಲೀಕರಣ ಆಗುವುದಲ್ಲದೆ, ಸಾಲ ಮರುಪಾವತಿಯೂ ನೂರಕ್ಕೆ ನೂರು ಆಗಲಿದೆ. ಅದೇ ರೀತಿ ಆಶಾ ಕಾರ್ಯಕರ್ತೆಯರಿಗೂ ಸಾಲ ಕೊಡಿಸುವ ವ್ಯವಸ್ಥೆಯನ್ನು ಶೀಘ್ರದಲ್ಲಿ ಜಾರಿಗೆ ತರಲಾಗುವುದು ಎಂದು ಸಚಿವರು ತಿಳಿಸಿದರು.ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜು ಮಾತನಾಡಿ, ಆಶಾ ಕಾರ್ಯಕರ್ತೆಯರ ಸೇವೆ ಗಣನೀಯ ಎಂದರು.ಸಂಸದರಾದ ಜಿ.ಎಂ.ಸಿದ್ದೇಶ್ವರ್, ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಷಣ್ಮುಗಪ್ಪ' ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ ಇತರರು ಇದ್ದರು.