ಮಂಡ್ಯ, ಫೆ.5, ಆಟೋ ರಿಕ್ಷಾಕ್ಕೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ನಡೆದಿದೆ.ಆಟೋದಲ್ಲಿದ್ದ ದುಂಡಳ್ಳಿ ನಿವಾಸಿ ಅಭೀ (29), ಮಲ್ಲನಕುಪ್ಪೆ ನಿವಾಸಿ ಕೃಷ್ಣ (23) ಹಾಗೂ ತಿಟ್ಟಮಾರನಹಳ್ಳಿ ಗ್ರಾಮದ ಪ್ರಶಾಂತ್ (25) ಮೃತಪಟ್ಟವರು.
ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ತಡರಾತ್ರಿ ಇವರೆಲ್ಲರೂ ಆಟೋದಲ್ಲಿ ಹೋಗುತ್ತಿದ್ದಾಗ ಮದ್ದೂರು ಪಟ್ಟಣದ ಅಡಿಗಾಸ್ ಹೋಟೆಲ್ ಬಳಿ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಕೆಸ್ತೂರು ಪೊಲೀಸರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.