ಗ್ರಾಮೀಣ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಗಣೇಶ ಶಂಕುಸ್ಥಾಪನೆ
ಕಂಪ್ಲಿ 15: ಪ್ರತಿ ಗ್ರಾಮದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುತ್ತಿದ್ದು, ಹಂತ ಹಂತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು’ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ತಾಲೂಕಿನ ರಾಮಸಾಗರ ಗ್ರಾಮದಲ್ಲಿ 2024-25ನೇ ಸಾಲಿನ ಕೆಕೆಆರ್‌ಡಿಬಿ ಮೈಕ್ರೋ ಪ್ರೊಜೆಕ್ಟ್ ಯೋಜನೆಯಡಿ ಸುಮಾರು 28.45 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ಸಲ್ಲಿಸಿದ ನಂತರ ಮಾತನಾಡಿ, ಗ್ರಾಮೀಣ ರಸ್ತೆ ಅಭಿವೃದ್ಧಿ, ಕುಡಿಯುವ ನೀರು ಸೇರಿದಂತೆ ಮತಕ್ಷೇತ್ರದಲ್ಲಿ ಕೆಲಸಗಳಿಗೆ ಆದ್ಯತೆ ನೀಡಲಾಗಿದೆ. ಆದರೆ ಅಭಿವೃದ್ಧಿಯ ಜೊತೆಯಲ್ಲಿ ಮಕ್ಕಳು ಶೈಕ್ಷಣಿಕ ಮಟ್ಟ ಹೆಚ್ಚಿಸುವ ಜವಾಬ್ದಾರಿ ಪ್ರತಿಯೊಬ್ಬ ಪಾಲಕರ ಮೇಲಿದೆ. ಶಿಕ್ಷಣ ಸುಧಾರಿಸಿದಲ್ಲಿ ಮಾತ್ರ ಸರ್ವತೋಮುಖ ಅಭಿವೃದ್ಧಿಯಾಗುತ್ತದೆ’. ಗುತ್ತಿಗೆದಾರರು ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಹೇಳಿದರು.
ಎಮ್ಮಿಗನೂರು ಗ್ರಾಮದಲ್ಲಿ 2024-25ನೇ ಸಾಲಿನ ಕೆಕೆಆರ್‌ಡಿಬಿ ಮೈಕ್ರೋ ಪ್ರೊಜೆಕ್ಟ್ ಯೋಜನೆಯಡಿ ಸುಮಾರು 38 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿ, ಜವುಕು ಗ್ರಾಮದಲ್ಲಿ 48.25 ಲಕ್ಷ ಹಾಗೂ ಗೋನಾಳ್ ಗ್ರಾಮದಲ್ಲಿ ಸುಮಾರು 22.63 ಲಕ್ಷ ವೆಚ್ಚದಲ್ಲಿ ಮತ್ತು ಜೀರಿಗನೂರಿನಲ್ಲಿ 15.45 ಲಕ್ಷ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಗ್ರಾಪಂ ಅಧ್ಯಕ್ಷೆ ಆಶಾ, ಉಪಾಧ್ಯಕ್ಷ ಆರ್.ಎಂ.ರಾಮಯ್ಯ, ಸದಸ್ಯರು, ಮುಖಂಡರಾದ ಶಿವಶಂಕರಗೌಡ, ಜಗದೀಶಗೌಡ, ನಾರಾಯಣಪ್ಪ, ಕಾಳಿಂಗ ವರ್ಧನ, ಬಿ.ಮಂಜುನಾಥ ಸೇರಿದಂತೆ ಇತರರು ಪಾಲ್ಗೊಂಡಿದ್ದರು.