ವಿಜಯಪುರ ಮೇ.27 : ಗ್ರಾಮಾಂತರ ಪ್ರದೇಶದಲ್ಲಿ ಮಾಡಲಾಗಿರುವ ಸಾಂಸ್ಥಿಕ ಕ್ವಾರಂಟೈನ್ ವ್ಯವಸ್ಥೆಯನ್ನು, ವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಖಾತೆ ಸಚಿವರಾದ ಶಶಿಕಲಾ ಜೊಲ್ಲೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿಂದು ಕೋವಿಡ್-19 ಮುನ್ನೆಚ್ಚರಿಕಾ ಕ್ರಮಗಳು ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ವಿವಿಧ ರಾಜ್ಯಗಳಿಂದ ಬಂದಿರುವ ವಲಸಿಗ ಜನರಿಗೆ ಸಾಂಸ್ಥಿಕ ಕ್ವಾರಂಟೈನ್ ವ್ಯವಸ್ಥೆ ಉತ್ತಮವಾಗಿ ನಿರ್ವಹಿಸುವ ಜೊತೆಗೆ ಆಯಾ ತಾಲೂಕಾ ಮತ್ತು ಗ್ರಾಮಾಂತರ ಪ್ರದೇಶದ ಅಧಿಕಾರಿಗಳು ಯಾವುದೇ ಲೋಪಕ್ಕೆ ಅವಕಾಶ ನೀಡದೆ ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಅದರಂತೆ ಕೋವಿಡ್-19 ಹಿನ್ನೆಲೆಯಲ್ಲಿ ಜನರು ತೀವ್ರ ಸಂಕಷ್ಟದಲ್ಲಿದ್ದು ಕ್ವಾರಂಟೈನ್ ಕೇಂದ್ರಗಳಲ್ಲಿ ಊಟೋಪಹಾರದ ವ್ಯವಸ್ಥೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಆಯಾ ತಹಶೀಲ್ದಾರರು, ತಾಲೂಕಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಂದಾಯ ಮತ್ತು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಅವಶ್ಯಕತೆ ಇರುವ ಕಡೆಗಳಲ್ಲಿ ಪಡಿತರ ಧಾನ್ಯಗಳನ್ನು ಸಮರ್ಪಕವಾಗಿ ಮತ್ತು ನ್ಯಾಯಬದ್ಧವಾಗಿ ದೊರೆಯುವಂತೆ ನೋಡಿಕೊಳ್ಳಲು ಅವರು ಸೂಚನೆ ನೀಡಿದರು.
ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ, ಇತ್ತೀಚೆಗೆ ಆಲಿಕಲ್ಲು ಮಳೆಯಿಂದ ಹಾನಿಗೊಳಗಾದ ತೋಟಗಾರಿಕೆ ಮತ್ತು ಕೃಷಿ ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಕುರಿತು ಶೀಘ್ರದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದ ಅವರು ಮಹಾರಾಷ್ಟ್ರ ರಾಜ್ಯಕ್ಕೆ ಪತ್ರದ ಮೂಲಕವೂ ಮನವಿ ಮಾಡುವದಾಗಿಯೂ ಅವರು ಶಾಸಕ ಯಶವಂತರಾಯಗೌಡ ಅವರ ಸಲಹೆ ಮೇರೆಗೆ ಸಭೆಗೆ ತಿಳಿಸಿದರು.
ಅದರಂತೆ ಕೋವಿಡ್-19 ಸಂಕಷ್ಟದ ಪರಿಸ್ಥಿತಿಯಲ್ಲಿ ಕೆಲವು ಕಾನೂನು ಉಲ್ಲಂಘನೆ ಪ್ರಕರಣಗಳ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲೆಯ ನದಿಪಾತ್ರದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.
ಆಲಮಟ್ಟಿ ಜಲಾಶಯ ಮೂಲಕ ಮತ್ತು ಇತರೆ ಜಲ ಸಂಪನ್ಮೂಲಗಳ ಮೂಲಕ ಕಾಲುವೆ ಮೂಲಕ ನೀರು ಸಮರ್ಪಕವಾಗಿ ಪೂರೈಸುವ ಕುರಿತು ಪ್ರತ್ಯೇಕ ಸಭೆಯನ್ನು ನಡೆಸಿ, ಸೂಕ್ತ ಪರಿಹಾರ ಕಂಡುಕೊಳ್ಳಬೇಕು.
ನಗರ ಮತ್ತು ಪಟ್ಟಣ ವ್ಯಾಪ್ತಿಯಲ್ಲಿ ಜಾರಿಯಾಗಿರುವ 24*7 ಕುಡಿಯುವ ನೀರಿನ ಯೋಜನೆಯ ಸಮರ್ಪಕ ಅನುಷ್ಠಾನ ಮತ್ತು ನಿಗದಿತ ಸಮಯಕ್ಕೆ ನೀರು ಬಿಡುವ ಬಗ್ಗೆ ಸಮಯ ನಿಗದಿ ಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು ಇಂಡಿ, ಸಿಂದಗಿ ಸೇರಿದಂತೆ ವಿವಿಧ ಭಾಗಗಳಲ್ಲಿ ಅತೀವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳ ಬಗ್ಗೆ ರೈತರಿಗೆ ಪರಿಹಾರ ಒದಗಿಸುವ ಬಗ್ಗೆ ಸಮೀಕ್ಷೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಯಾವುದೇ ರೀತಿಯ ಪ್ರಮುಖ ಘಟನೆಗಳು ನಡೆದಲ್ಲಿ ಈ ಕುರಿತು ಆಯಾ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತಮ್ಮ ಗಮನಕ್ಕೆ ತರುವಂತೆ ತಿಳಿಸಿದ ಸಚಿವರು ಕೋವಿಡ್-19 ಚಿಕಿತ್ಸಾ ವಿಧಾನ, ಸ್ಥಿತಿಗತಿ, ಕುಡಿಯುವ ನೀರಿನ ವ್ಯವಸ್ಥೆ, ತೋಟಗಾರಿಕಾ, ಕೃಷಿ ಬೆಳೆಗಳ ಹಾನಿ, ಶಿಕ್ಷಣ ಇಲಾಖೆ, ಕಾಮರ್ಿಕ ಇಲಾಖೆ, ಎಪಿಎಂಸಿ, ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ಆಹಾರ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಈವರೆಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ 44 ಗುಣಮುಖ ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ - 28 ಜನ ಸಕ್ರಿಯ ರೋಗಿಗಳು : ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 27,383 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಒಟ್ಟು 76 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದಾರೆ.
1925 ಜನರು 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 25410 ಜನರು (1 ರಿಂದ 28 ದಿನಗಳ) ರಿಪರ್ೋಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು 4 ಜನ ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ.
44 ಜನರು ಕೋವಿಡ್-19 ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 28 ಜನರು ಆಸ್ಪತ್ರೆಯಲ್ಲಿರುವ ಕೋವಿಡ್-19 ಸಕ್ರಿಯ ರೋಗಿಗಳಾಗಿದ್ದಾರೆ. ಈವರೆಗೆ 18,233 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 9,856 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 8298 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸದ್ಯ ಜಿಲ್ಲೆಯಲ್ಲಿ ಕೇವಲ 11 ಗ್ರಾಮಗಳಿಗೆ 35 ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಕಳೆದ ಬಾರಿ ಇದೇ ಅವಧಿಯಲ್ಲಿ 122 ಗ್ರಾಮಗಳಿಗೆ 2 ಸಾವಿರ ಟ್ಯಾಂಕರಗಳ ಮೂಲಕ ನೀರು ಪೂರೈಸಲಾಗಿತ್ತು. ಸದ್ಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮತ್ತು ಏತ ನೀರಾವರಿ ಯೋಜನೆಗಳ ಮೂಲಕ 16 ಕೆರಗಳನ್ನು ತುಂಬಿರುವ ಫಲವಾಗಿ 296 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ನಿಂತಿದ್ದು, ಜೂನ್ 15 ರವರೆಗೆ ನೀರಿನ ಯಾವುದೇ ಕೊರತೆಯಿಲ್ಲ ಎಂದು ಹೇಳಿದರು. ಸಭೆಯಲ್ಲಿ ಶಾಸಕರಾದ ಯಶವಂತರಾಯಗೌಡ ಪಾಟೀಲ, ಎಮ್.ಸಿ ಮನಗೂಳಿ ಅವರು ಇಂಡಿ ಮತ್ತು ಸಿಂದಗಿ ಭಾಗದಲ್ಲಿನ ಸಮಸ್ಯೆಗಳ ಬಗ್ಗೆ ಸಚಿವರ ಗಮನಕ್ಕೆ ತಂದರು. ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿ,ಪಂ ಸಿಇಒ ಗೋವಿಂದ ರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು