ಸ್ವಾತಂತ್ರ್ಯ ದಿನಾಚರಣೆಗೆ ಕಡ್ಡಾಯ ಹಾಜರಾತಿ

ಸ್ವಾತಂತ್ರ್ಯ ದಿನಾಚರಣೆಗೆ ಕಡ್ಡಾಯ ಹಾಜರಾತಿ  Mandatory attendance for Independence Day celebrations

ಬ್ಯಾಡಗಿ  06: ತಾಲೂಕಿನಲ್ಲಿ ಆಗಸ್ಟ್‌ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಎಲ್ಲಾ ಶಾಲಾ ವಿದ್ಯಾರ್ಥಿಗಳು ಹಾಗೂ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು. ಗೈರುಹಾಜರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್‌ ಎಚ್ಚರಿಸಿದರು.  

ತಾಲೂಕು ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಎಸ್‌ಜೆಜೆಎಂ ತಾಲೂಕು ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನಡೆಯಲಿದ್ದು, ಬಳಿಕ ಪೊಲೀಸ್, ಗೃಹರಕ್ಷಕ ದಳ ಹಾಗೂ ಶಾಲಾ ವಿದ್ಯಾರ್ಥಿಗಳ ಪಥಸಂಚಲನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.  

ರಾಷ್ಟ್ರೀಯ ಹಬ್ಬಗಳನ್ನು ಗ್ರಾಮೀಣ ಪ್ರದೇಶಗಳಲ್ಲಿಯೂ ಅರ್ಥಪೂರ್ಣವಾಗಿ ಆಚರಿಸಿ, ಅವುಗಳ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.