ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆ ಇನ್ನೂ ಹೆಚ್ಚಲಿ : ಸೌಮ್ಯ ಬಾಪಟ್

May the achievements of women in the field of technology continue to increase: Soumya Bapat

ಬೆಳಗಾವಿ 13: ಕಲೆ, ವಿಜ್ಞಾನ, ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ಕ್ಷಿಪ್ರಗತಿಯಲ್ಲಿ ಆಗುತ್ತಿದ್ದು, ಇವುಗಳಿಗೆ ಹೋಲಿಕೆ ಮಾಡಿದ್ದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಅವರ ಸಾಧನೆ ಇನ್ನೂ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಬೇಕೆಂದು ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸೌಮ್ಯ ಬಾಪಟ್ ಅಭಿಪ್ರಾಯಪಟ್ಟರು.  

ಅವರು ಇಂದು ನಗರದ ಎಸ್‌. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಹಿಳಾ ಸಬಲೀಕರಣ ಘಟಕದ ವತಿಯಿಂದ ಹಮ್ಮಿಕೊಂಡ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಆರ್ಥಿಕವಾಗಿ ಬೆಳವಣಿಗೆ ಹೊಂದುತ್ತಿರುವ ಸಮಾಜದಲ್ಲಿ ಮಹಿಳೆ ತನ್ನ ಬದುಕನ್ನು ಕಟ್ಟಿಕೊಳ್ಳಲು ಹೇಗೆ ಸಬಲಳಾಗಬೇಕು ಎಂಬುದರ ಕುರಿತು ಅವರು ವಿವರಿಸಿದರು. 

ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ  ಡಾ. ಬಿ.ಆರ್‌.ಪಟಗುಂದಿ ಸಮಾಜದಲ್ಲಿ ಮಹಿಳೆಯ ಸ್ಥಾನ-ಮಾನ ಹಂತ ಹಂತವಾಗಿ ಬೆಳವಣಿಗೆ ಕಾಣುತ್ತಿದೆ. ನಾಗನೂರು ರುದ್ರಾಕ್ಷಿಮಠ ಮಹಿಳೆಯರ ಸ್ವಾವಲಂಬನೆಗೆ ಹೆಚ್ಚು ಅವಕಾಶ ನೀಡುತ್ತಿದ್ದು, ಮಹಾವಿದ್ಯಾಲಯದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿಗಳಿರುವುದೇ ಇದಕ್ಕೆ ಸಾಕ್ಷಿ ಎಂದು ಹರ್ಷ ವ್ಯಕ್ತಪಡಿಸಿದರು.  

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಚೇರ್ಮನ್ ಡಾ. ಎಫ್‌.ವಿ.ಮಾನ್ವಿ  ವಹಿಸಿದ್ದರು. ಇದೇ ಸಂದಭದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ  ಹಮ್ಮಿಕೊಂಡ ರಂಗೋಲಿ, ಮೆಹಂದಿ,  ಲಿಪ್ ಸಿಂಕ್ ಸೇರಿದಂತೆ ಇತರೆ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಗಳಿಗೆ ಬಹುಮಾನ ವಿತರಿಸಲಾಯಿತು. ಅದಲ್ಲದೇ ಪ್ರಸಕ್ತ ಸಾಲಿನಲ್ಲಿ ಪಿ.ಎಚ್‌.ಡಿ ಪೂರ್ಣಗೊಳಿಸಿದ ಮಹಾವಿದ್ಯಾಲಯದ ಮಹಿಳಾ ಸಿಬ್ಬಂದಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. 

ವೇದಿಕೆಯ ಮೇಲೆ ಮಹಿಳಾ ಸಬಲೀಕರಣ ಘಟಕದ ಸಂಯೋಜಕರಾದ ಡಾ. ಶೈಲಜಾ ಮಾಳಿ ಸೇರಿದಂತೆ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.