ಹಾವೇರಿ 28: ಜಿಲ್ಲಾಡಳಿತದಿಂದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ ಏಪ್ರಿಲ್ 10 ರಂದು ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಮತಾ ಹೊಸಗೌಡ್ರ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಭಗವಾನ್ ಮಹಾವೀರ ಜಯಂತಿ ಆಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಾಜದ ಮುಖಂಡರ ಆಶಯದಂತೆ ಅಂದು ಬೆಳಿಗ್ಗೆ 9 ಗಂಟೆಗೆ ಹಾವೇರಿ ನಗರದ ಬಸ್ತಿಯಲ್ಲಿರುವ ಭಗವಾನ್ ನೇಮಿನಾಥ ದಿಗಂಬರ್ ಜೈನಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಹಾಗೂ ಮೆರವಣಿಗೆಗೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಆಮಂತ್ರಣಪತ್ರಿಕೆ, ಉಪನ್ಯಾಸಕರ ಆಯ್ಕೆ, ವೇದಿಕೆ, ಆಸನ, ಕುಡಿಯುವ ನೀರು, ಉಪಹಾರ ವ್ಯವಸ್ಥೆ ಕುರಿತು ಸಮಾಜದ ಮುಖಂಡರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಎಲ್ಲ ಶಾಲಾ-ಕಾಲೇಜುಗಳಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ ಮಾಡುವಂತೆ ಆದೇಶ ಹೊರಡಿಸಲು ಸಮಾಜದ ಮುಖಂಡರು ಮನವಿ ಮಾಡಿಕೊಂಡರು.
ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣಾ ಉಪನಿರ್ದೇಶಕರ ಮೂಲಕ ಆದೇಶ ಹೊರಡಿಸಲಾಗುವುದು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ ಅವರು ಕಾರ್ಯಕ್ರಮದ ರೂಪರೇಷೆಗಳ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದ ಮುಖಂಡರಾದ ಚಂದ್ರನಾಥ ಕಳಸೂರ, ವಜ್ರಕುಮಾರ, ಪದ್ಮರಾಜ ಕಳಸೂರ, ಮಹಾವೀರ ಕಳಸೂರ, ಭರತ ಹಜಾರಿ, ವಿಜಯಕುಮಾರ ಸಾತಗೊಂಡ, ಭೂಪಾಲ ಹೋಳಗಿ ಇತರರು ಉಪಸ್ಥಿತರಿದ್ದರು