ಗ್ಯಾರಂಟಿ ಯೋಜನೆಗಳ ಲಾಭ ಅರ್ಹರಿಗೆ ತಲುಪಿಸಲು ಕ್ರಮ: ಪಿ.ಟಿ. ಪರಮೇಶ್ವರ ನಾಯಕ್

ಗ್ಯಾರಂಟಿ ಯೋಜನೆಗಳ ಲಾಭ ಅರ್ಹರಿಗೆ ತಲುಪಿಸಲು ಕ್ರಮ: ಪಿ.ಟಿ. ಪರಮೇಶ್ವರ ನಾಯಕ್  Measures to ensure benefits of guarantee schemes reach eligible beneficiaries: P.T. Parameshwar Naik

ಹೂವಿನಹಡಗಲಿ 23: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡವರ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿದ್ದು, ಅವುಗಳ ಪ್ರಯೋಜನ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯಕ್ ಹೇಳಿದರು.  

ಪಟ್ಟಣದ ತಮ್ಮ ನಿವಾಸದಲ್ಲಿ ಗುರುವಾರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಕಾಪಾಡುತ್ತಿದ್ದು, ಅನರ್ಹರಿಗೆ ಸೌಲಭ್ಯ ಸಿಗದಂತೆ ಪರೀಶೀಲನೆ ನಡೆಸಿ, ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಗಳ ಲಾಭ ತಲುಪಿಸಲಾಗುತ್ತಿದೆ ಎಂದು ಹೇಳಿದರು.  

ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿ ಯಾರೂ ವಂಚಿತರಾಗದಂತೆ ಪ್ರತಿಯೊಬ್ಬರೂ ಮತದಾರರ ಗುರುತಿನ ಚೀಟಿ ಪಡೆದು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.  

ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಹೂವಿನಹಡಗಲಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನ ಬಗ್ಗೆಯೂ ಆಶಾಭಾವನೆ ವ್ಯಕ್ತಪಡಿಸಿದರು.  ಇದಕ್ಕೂ ಮುನ್ನ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಹಡಗಲಿಗೆ ಆಗಮಿಸಿದ ಪಿ.ಟಿ. ಪರಮೇಶ್ವರ ನಾಯಕ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬೈಕ್ ರ್ಯಾಲಿ ಮತ್ತು ಭವ್ಯ ಮೆರವಣಿಗೆಯ ಮೂಲಕ ಸ್ವಾಗತಿಸಿದರು.  

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಟವಾಳಗಿ ಕೊಟ್ರೇಶ್, ಬಿ. ಹನುಮಂತಪ್ಪ, ಪ್ರಚಾರ ಸಮಿತಿ ಅಧ್ಯಕ್ಷ ಸೋಗಿ ಹಾಲೇಶ್, ಪಂಚ ಗ್ಯಾರಂಟಿ ತಾಲೂಕು ಅಧ್ಯಕ್ಷ ಪಿ.ಟಿ. ಭರತ್, ಗುರುವಿನ ರಾಜು, ಅರವಳ್ಳಿ ವೀರಣ್ಣ, ಬಸವನಗೌಡ ಪಾಟೀಲ್, ಪಿ. ವಿಜಯಕುಮಾರ್, ಕೆ. ಗೌಸ್, ಕೆ.ಎಸ್‌. ಶಾಂತನಗೌಡ, ವಸಂತ್, ಶಿವಕುಮಾರ್, ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ಬಿಚ್ಚುಗತ್ತಿ ಖಾಜಾ ಹುಸೇನ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.