ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆಯ ವಿವಿಧ ಸಮಿತಿಗಳ ಸಭೆ
ಗದಗ 4 : ಸರಕಾರದಿಂದ ಮಹಿಳಾ ಮತ್ತು ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಇರುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ್ಯ ವಿವಾಹ ತಡೆಗಟ್ಟಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೊಂದಿಗೆ ವಿವಿಧ ಇಲಾಖೆಯ ಸಹಭಾಗಿತ್ವವೂ ಅವಶ್ಯಕವಾಗಿದೆ ಎಂದರು.
ಬಾಲ್ಯ ವಿವಾಹ ನಿಷೇಧ ಹಾಗೂ ಫೋಕ್ಸೋ ಕಾಯ್ದೆಯ ಕುರಿತು ಇನ್ನೂ ಹೆಚ್ಚಿನ ಅರಿವು ಮೂಡಿಸುವ ಕೆಲಸವಾಗಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಮೂಲಭೂತ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ದೌರ್ಜನ್ಯ, ಮಹಿಳೆಯರ ಮತ್ತು ಮಕ್ಕಳ ಸಾಗಾಟ, ಕೌಟುಂಬಿಕ ದೌರ್ಜನ್ಯ ಸೇರಿದಂತೆ ವಿವಿಧ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡ್ರ ಮಾತನಾಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ಕಾನೂನು ಇಲಾಖೆಯ ಸಹಕಾರದೊಂದಿಗೆ ಮಹಿಳೆಯರಿಗೆ ಮತ್ತು ಮಕ್ಕಳಿಗಾಗಿ ಇರುವ ವಿವಿಧ ಯೋಜನೆಗಳ ಹಾಗೂ ಬಾಲ್ಯ ವಿವಾಹ ನಿಷೇಧ, ಫೋಕ್ಸೋ ಕಾಯ್ದೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕೆಂದು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರು ಮಾತನಾಡಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯಗಳೊಂದಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕೆಂದು ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಪದ್ಮಾವತಿ ಜಿ ಮಾತನಾಡಿ ಸಖಿ ಒನ್ ಸ್ಟಾಪ್ ಸೆಂಟರ್, ಮಿಷನ್ ಶಕ್ತಿ ಯೋಜನೆಯ ಮಹಿಳಾ ಸಬಲೀಕರಣ ಘಟಕ ಹಾಗೂ ಸಾಂತ್ವನ ಕೇಂದ್ರಗಳ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಅತೀ ಕಡಿಮೆ ಲಿಂಗಾನುಪಾತ ಇರುವ ತಾಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೀದಿ ನಾಟಕಗಳ ಮುಖಾಂತರ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ಕುರಿತಂತೆ ತಾಲೂಕಾ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅರಿವು ಕಾರ್ಯಕ್ರಮಗಳನ್ನುಹಮ್ಮಿಕೊಳ್ಳಲಾಗಿದೆ. 2024-2025 ನೇ ಸಾಲಿನ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ಜಿಲ್ಲೆಯಲ್ಲಿ ಜನೆವರಿ 2025 ರಿಂದ ಮಾರ್ಚ 2025 ರವರೆಗೆ 26 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಬಾಲಕಿಯರ ವಸತಿ ನಿಲಯಗಳಲ್ಲಿ 50 ವಿದ್ಯಾರ್ಥಿಗಳು ವಸತಿ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸ್ವಾಧಾರ ಗೃಹ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ, ಪಾಲನಾ ಯೋಜನೆ, ಸಖಿ ನಿವಾಸ ಉದ್ಯೋಗ ಮಹಿಳೆಯರ ವಸತಿ ನಿಲಯ, ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಸಾಗಾಟ ತಡೆ ಯೋಜನೆ, ಸ್ವೀಕಾರ ಕೇಂದ್ರ, ವಿಧವಾ ಕೋಶ ಯೋಜನೆ , ಸಾಂತ್ವನ ಯೋಜನೆ, ಜಿಲ್ಲಾ ಮತ್ತು ತಾಲೂಕು ಶಿಶು ಪಾಲನಾ ಯೋಜನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾದಿಕಾರಿ ಎಂ.ಬಿ.ಸಂಕದ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಮೀನಾಕ್ಷಿ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ರಫೀಕಾ ಹಳ್ಳೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ರಾಧಾ ಮಣ್ಣೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಯವರು ಹಾಜರಿದ್ದರು.