ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು ಸಚಿವ ಡಾ.ಎಂ.ಬಿ.ಪಾಟೀಲ ಕರೆ
Minister Dr. M.B. Patil calls for prioritizing quality education to shape the future of children
ಲೋಕದರ್ಶನ ವರದಿ
ವಿಜಯಪುರ, ಫೆ.16 : ಶಾಲೆಗಳಿಗೆ ಶಿಕ್ಷಕರು ಹೃದಯವಿದ್ದ ಹಾಗೆ, ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ ದೊರಕಿಸಲು ಶಿಕ್ಷಕರು ಯೋಜನಾ ಬದ್ಧವಾಗಿ ಪಾಠ ಬೋಧನೆಗೆ ಆದ್ಯತೆ ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಕರೆ ನೀಡಿದರು.
ಅವರು, ನಗರದ ಹೆಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಹಾಗೂ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ಗ್ರಾಮೀಣ ವಲಯದ ಎಸ್‌ಎಸ್‌ಎಲ್‌ಸಿ 2026 ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ ಪುನಶ್ಚೇತನ ಕಾರ್ಯಾಗಾರ ಹಾಗೂ ತಾಲೂಕು ಮಟ್ಟದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರು ಮಾತನಾಡಿದರು.
ಪಾಲಕರು ಕಡ್ಡಾಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಗುಣಮಟ್ಟದ ಶಿಕ್ಷಣ ಒದಗಿಸುವ ಮೂಲಕ ಮಕ್ಕಳ ಶೈಕ್ಷಣಿಕ ಮಟ್ಟದ ಬೆಳವಣಿಗೆಗಾಗಿ ಪಾಲಕರು, ಶಿಕ್ಷಕರು ವಿಶೇಷ ಗಮನ ಹರಿಸಬೇಕು ಎಂದು ಅವರು ಹೇಳಿದರು.ಜಿಲ್ಲೆಯಲ್ಲಿ ಶಿಕ್ಷಣಕ್ಕಾಗಿ ಹೆಚ್ಚಿನ ಒತ್ತು ನೀಡಿ ಅವಶ್ಯಕ ವಾತಾವರಣ ನಿರ್ಮಿಸಲಾಗಿದೆ.ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವತ್ತ ಎಲ್ಲರೂ ಶ್ರಮಿಸಬೇಕು. ಕಲಿಕಾ ಮಟ್ಟ ಹೆಚ್ಚಿಸಲು ಶ್ರಮಿಸಬೇಕು. ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಒಟ್ಟಾರೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ದೃಷ್ಟಿಯಿಂದ ಜವಾಬ್ದಾರಿ ತೆಗೆದುಕೊಂಡು ಶಿಕ್ಷಕರು, ಅಧಿಕಾರಿಗಳು ಶ್ರಮಿಸುವ ಮೂಲಕ ಶೈಕ್ಷಣಿಕ ಗುಣಮಟ್ಟ ಹಾಗೂ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಕೈ ಜೋಡಿಸಬೇಕು ಎಂದು ಅವರು ಹೇಳಿದರು.
ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಿ, ಅವರು ಉನ್ನತ ಶಿಕ್ಷಣ ಪಡೆದು ಸಾಧಕರಾಗಿ ಹೊರ ಹೊಮ್ಮಲು ಉತ್ತಮ ಕಲಿಕಾ ಅವಕಾಶ ಕಲ್ಪಿಸಿಕೊಟ್ಟು, ಉತ್ತಮ ಬೋಧನಾ ಕ್ರಮ ಅನುಸರಿಸಿ ಅವರು ಅಧ್ಯಯನಶೀಲತೆ ರೂಢಿಸಿಕೊಳ್ಳಲು ಪ್ರೇರೆಪಿಸಬೇಕು.ಮಕ್ಕಳು ಭವಿಷ್ಯದಲ್ಲಿ ಉನ್ನತ ಹುದ್ದೆ ಹೊಂದಲು ಶಿಕ್ಷಕರ ಪಾತ್ರ ಬಹುದೊಡ್ಡದಿದ್ದು, ಆ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳನ್ನು ಸಿದ್ಧಗೊಳಿಸಬೇಕು ಎಂದು ಹೇಳಿದರು.
ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಾಧಿಕಾರಿಗಳಾದ ಬಸವರಾಜ ತಳವಾರ ಅವರು ಮಾತನಾಡಿ, ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವ ಸಚಿವರ ಆಶಯದಂತೆ ಸಿಎಸ್‌ಆರ್ ಅನುದಾನವನ್ನು ಬಳಸಿಕೊಂಡು ಸುಸಜ್ಜಿತ ಸ್ಮಾರ್ಟಕ್ಲಾಸ್ ಕೊಠಡಿಗಳನ್ನು ನಿರ್ಮಾಣ ಮಾಡಿ, ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸಿ ಪ್ರೊತ್ಸಾಹಿಸಲಾಗುತ್ತಿದೆ. ವಿಜಯಪುರ ಗ್ರಾಮೀಣ ವಲಯದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾತನಾಡಿದರು.
ಚಾಣಕ್ಯ ಕರಿಯರ್ ಅಕಾಡೆಮಿಯ ಮುಖ್ಯಸ್ಥ ಎನ್.ಎಂ ಬಿರಾದಾರ ಅವರು ಮಾತನಾಡಿ, ವಿದ್ಯಾರ್ಥಿಗಳು ಪ್ರೇರಣೆ ಹೊಂದಿ, ಆಸಕ್ತಿಯನ್ನು ಮೈಗೂಡಿಸಿಕೊಂಡು ಏಕಾಗ್ರತೆ ಸಾಧಿಸಿಕೊಳ್ಳುವ ಮೂಲಕ ನೆನಪಿನಶಕ್ತಿ ಹೆಚ್ಚಿಸಿಕೊಳ್ಳಬೇಕು. ಎಲ್ಲಾ ವಿಷಯಗಳನ್ನು ಕರಗತ ಮಾಡಿಕೊಂಡು, ಜೀವನದಲ್ಲಿ ಉತ್ತಮ ಸಾಧನೆ ಮಾಡಿ ಎಂದು ಹೇಳಿದರು.
2024-25ನೇ ಸಾಲಿನಲ್ಲಿ ತಾಲೂಕಾ ಮಟ್ಟದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ,ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ತಲಾ 50,000/- ರೂಗಳ ಚೆಕ್ ಹಾಗೂ 2023-24ನೇ ಸಾಲಿನಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ತಾಲೂಕ ಮಟ್ಟದ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪಟಾಪ್ ವಿತರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ,ವಿಜಯಪುರದ ಡಯಟ್ ಪ್ರಾಂಶುಪಾಲರಾದ ಉಮಾದೇವಿ ಸೊನ್ನದ, ಅಶೋಕ ಮಲಘಾಣ, ಮಾಚಪ್ಪನವರ, ಕೆ.ಬಿ ಪಾಟೀಲ ವಿವಿಧ ಗ್ರಾಮೀಣ ವಲಯದ ವ್ಯಾಪ್ತಿಯ ಸರ್ಕಾರಿ,ಅನುದಾನಿತ, ಅನುದಾನರಹಿತ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 