ವಿಜಯಪುರ 24: ಪರೀಕ್ಷೆ ಬರೆಯಲು ತೆರಳುವಾಗ ರಸ್ತೆ ಅಪಘಾತದಲ್ಲಿ ಗಾಯಗೊಂಡು ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 10ನೇ ತರಗತಿ ವಿದ್ಯಾರ್ಥಿನಿಯರನ್ನು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಇಂದು ಸೋಮವಾರ ಜಿಲ್ಲೆಯ ಕುಮಟಗಿ ತಾಂಡಾದ 10ನೇ ತರಗತಿಯ ವಿದ್ಯಾರ್ಥಿಗಳಾದ ಐಶ್ವರ್ಯಾ ಚವ್ಹಾಣ, ಪ್ರೀತಿ ಚವ್ಹಾಣ ಮತ್ತು ಪಕ್ಕದ ಮನೆಯ ಶ್ವೇತಾ ರಾಠೋಡ ಕಗ್ಗೋಡು ಪ್ರೌಢಶಾಲಾ ಕೇಂದ್ರಕ್ಕೆ ತೆರಳುವಾಗ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ವಿಜಯಪುರ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ವಿಷಯ ತಿಳಿದ ತಕ್ಷಣ ಸಚಿವರು ಬಿ.ಎಲ್.ಡಿ.ಇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರನ್ನು ಭೇಟಿಯಾಗಿ ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಅಲ್ಲದೇ, ವಿದ್ಯಾರ್ಥಿಗಳು ಸಂಪೂರ್ಣ ಚೇತರಿಸಿಕೊಳ್ಳುವವರೆಗೆ ಅವರಿಗೆ ಉಚಿತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಉಪಸ್ಥಿತರಿದ್ದರು.