ಮುಧೋಳ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ

ಮುಧೋಳ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ Mudhol Zone-Level High School Sports Meet Kicks Off

ಯಲಬುರ್ಗಾ 02:  ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯೊಂದಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ಕ್ರೀಡೆ ಅತ್ಯಂತ ಅಗತ್ಯವಾಗಿದೆ. ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ, ಶಿಸ್ತು, ಸಮಯಪಾಲನೆ ಹಾಗೂ ತಂಡದ ಮನೋಭಾವ ಮುಖ್ಯ ಎಂದು ಪ್ರಭಾರಿ ದೈಹಿಕ ಶಿಕ್ಷಣಾಧಿಕಾರಿ ಶರಣಪ್ಪ ವೀರಪೂರ ಹೇಳಿದರು.  ಪಟ್ಟಣದ ಶ್ರೀ ಸಿದ್ಧರಾಮೇಶ್ವರ ಪ್ರೌಢಶಾಲೆ ಆವರಣದಲ್ಲಿ 2026-27ನೇ ಸಾಲಿನ ಮುಧೋಳ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಬುಧವಾರ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಂಸ್ಥಾನ ಹಿರೇಮಠ ಯಲಬುರ್ಗಾದ ಪರಮಪೂಜ್ಯ ಶ್ರೀ ಷ.ಬ್ರ. ಸಿದ್ಧರಾಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ.

ಶಿಕ್ಷಣದ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ದೈಹಿಕ-ಮಾನಸಿಕ ಸದೃಢತೆ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಬೇಕು ಎಂದು ಕರೆ ನೀಡಿದರು. ಕ್ರೀಡಾಕೂಟದ ಅಂಗವಾಗಿ ವಿವಿಧ ಪ್ರೌಢಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಕ್ರೀಡಾ ಧ್ವಜ ಹಾಗೂ ವಿವಿಧ ಶಾಲೆಗಳ ಧ್ವಜಗಳೊಂದಿಗೆ ಉತ್ಸಾಹದಿಂದ ಪಾಲ್ಗೊಂಡರು. ಮೈದಾನದಲ್ಲಿ ನಡೆದ ಪಥಸಂಚಲನ ಹಾಗೂ ಕ್ರೀಡಾ ಚಟುವಟಿಕೆಗಳು ನೋಡುಗರ ಗಮನ ಸೆಳೆದವು. ವಿವಿಧ ಕ್ರೀಡಾ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಮರ​‍್ಪ ಕಲಬುರ್ಗಿ, ಮಲ್ಲೇಶಗೌಡ ಮಾಲಿಪಾಟೀಲ್, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ವೀರೇಶ ಅಂಗಡಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ಎಸ್‌.ಡಿ. ಅಪ್ಪಾಜಿ ಹಾಗೂ ಬಿ.ಕೆ. ಜಾರಗಡ್ಡಿ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು. ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.