ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ವನಮಹೋತ್ಸವ ಆಚರಣೆ

 ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ವನಮಹೋತ್ಸವ ಆಚರಣೆ  NREGA Employees Welfare Development Association celebrates Vanamahotsava

ಗದಗ 01:  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಸವಿನೆನಪು ಹಾಗೂ ವಿಕಸಿತ ಭಾರತ (ವಿ.ಬಿ) ಗ್ರಾಮ ಯೋಜನೆಯ ಆರಂಭದ ಅಂಗವಾಗಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಗದಗ ಜಿಲ್ಲಾ ಘಟಕದ ವತಿಯಿಂದ ನಗರದ ಆರಿ​‍್ಟ.ಪಿ.ಆರ್‌. ವಿಶ್ವವಿದ್ಯಾಲಯದ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.  

ಕಾರ್ಯಕ್ರಮಕ್ಕೆ ಸಂಘದ ಗೌರವಾಧ್ಯಕ್ಷ ಸಿದ್ದಲಿಂಗೇಶ ಪಾಟೀಲ ಅವರು ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಪ್ರಕೃತಿ ಮತ್ತು ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಒಂದು ಮರ ನೂರಾರು ಜನರಿಗೆ ನೆರಳು ನೀಡುವುದರ ಜೊತೆಗೆ ಮುಂದಿನ ಪೀಳಿಗೆಗೆ ಆರೋಗ್ಯಕರ ಪರಿಸರ ನಿರ್ಮಿಸುವ ಶಕ್ತಿ ಹೊಂದಿದೆ. ಆದ್ದರಿಂದ ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿಯನ್ನಾದರೂ ನೆಟ್ಟು ಅದನ್ನು ಮರವಾಗಿ ಬೆಳೆಸುವ ಸಂಕಲ್ಪ ಮಾಡಬೇಕು ಎಂದು ಹೇಳಿದರು.  

ಸಂಘದ ಜಿಲ್ಲಾ ಅಧ್ಯಕ್ಷ ಸುರೇಶ ಬಾಳಿಕಾಯಿ ಮಾತನಾಡಿ, ನರೇಗಾ ಯೋಜನೆಯು ಗ್ರಾಮೀಣಾಭಿವೃದ್ಧಿ, ಜಲ ಸಂರಕ್ಷಣೆ, ಹಸಿರು ಪರಿಸರ ನಿರ್ಮಾಣ ಹಾಗೂ ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಹೊಸ ರೂಪದಲ್ಲಿ ಆರಂಭವಾಗುತ್ತಿರುವ ವಿಕಸಿತ ಭಾರತ ಗ್ರಾಮ ಯೋಜನೆಯು ಗ್ರಾಮೀಣ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಲಿ ಎಂದು ಆಶಿಸಿದರು.  

ಕಾರ್ಯಕ್ರಮದಲ್ಲಿ ಸಂಘದ ಎಲ್ಲ ಸದಸ್ಯರು ಸೇರಿ 100ಕ್ಕೂ ಹೆಚ್ಚು ವಿವಿಧ ಜಾತಿಯ ಸಸಿಗಳನ್ನು ನೆಟ್ಟು, ಅವುಗಳ ಸಂರಕ್ಷಣೆ ಹಾಗೂ ಪೋಷಣೆಯ ಜವಾಬ್ದಾರಿ ವಹಿಸುವ ಸಂಕಲ್ಪ ಮಾಡಿದರು. ಸಸಿ ನೆಡುವುದಷ್ಟೇ ಅಲ್ಲದೆ ಅವುಗಳನ್ನು ಬೆಳೆಸಿ ಉಳಿಸುವುದೇ ನಿಜವಾದ ಪರಿಸರ ಸೇವೆಯಾಗಿದೆ ಎಂದು ಸದಸ್ಯರು ಅಭಿಪ್ರಾಯಪಟ್ಟರು.  

ಹೊಸ ಜಿಲ್ಲಾ ಪದಾಧಿಕಾರಿಗಳ ನೇಮಕದ ನಂತರ ನಡೆದ ಮೊದಲ ಸಂಘಟನಾ ಕಾರ್ಯಕ್ರಮ ಇದಾಗಿದ್ದು, ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ನರೇಗಾ ನೌಕರರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರ ನಡುವೆ ಪರಸ್ಪರ ಸಹಕಾರ, ಸಂಘಟನೆಯ ಬಲವರ್ಧನೆ ಹಾಗೂ ನೌಕರರ ಹಿತಾಸಕ್ತಿಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲಾಯಿತು.  

ಪರಿಸರ ಸಂರಕ್ಷಣೆಯ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿ ಸಂಘದ ಪಾತ್ರವನ್ನು ವಿಸ್ತರಿಸುವ ಸಂಕಲ್ಪವನ್ನು ಕಾರ್ಯಕ್ರಮದಲ್ಲಿ ವ್ಯಕ್ತಪಡಿಸಲಾಯಿತು. ಮುಂದಿನ ದಿನಗಳಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಜನಜಾಗೃತಿ ಹಾಗೂ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಂಘ ನಿರ್ಧರಿಸಿದೆ.