ಮಮದಾಪುರ ಅರಣ್ಯಕ್ಕೆ ಸಿದ್ದೇಶ್ವರ ಸ್ವಾಮಿ ಹೆಸರು : ಡಾ. ಪ್ರಭುಗೌಡ ಹರ್ಷ

ದೇವರಹಿಪ್ಪರಗಿ 17: ವಿಜಯಪುರ ಜಿಲ್ಲೆಯ ಮಮದಾಪುರ ಗ್ರಾಮದ 1494 ಎಕರೆ 38 ಗುಂಟೆ ಅರಣ್ಯ ಪ್ರದೇಶಕ್ಕೆ ನಡೆದಾಡುವ ದೇವರು, ಶತಮಾನದ ಸಂತ,ಈ ಭಾಗದ ಆರಾಧ್ಯ ದೈವ ಖ್ಯಾತ ನಾಮರಾದ ಜ್ಞಾನ ಯೋಗಾಶ್ರಮದ ಲಿಂ. ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪಾರಂಪರಿಕ ತಾಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ  ಘೋಷಣೆ ಮಾಡಿದ್ದು ಈ ಭಾಗದ ಜನರಿಗೆ ಹರ್ಷ ಉಂಟು ಮಾಡಿದೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಗೌಡ ಲಿಂಗದಳ್ಳಿ (ಚಬನೂರ) ತಿಳಿಸಿದ್ದಾರೆ.

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ತಮ್ಮ ಆಧ್ಯಾತ್ಮಿಕ ಬೋಧನೆಗಳಿಂದ ಜನಮನ ಗೆದ್ದಿದ್ದಾರೆ, ಸಿದ್ದೇಶ್ವರ ಸ್ವಾಮೀಜಿಯವರ ಪರಿಸರ ಸಂರಕ್ಷಣೆ ಮತ್ತು ಸಮುದಾಯ ಯೋಗಕ್ಷೇಮಕ್ಕೂ ದೊಡ್ಡ ಕೊಡುಗೆ ನೀಡಿದ್ದಾರೆ. ಶ್ರೀಗಳ ಸ್ಮರಣಾರ್ಥ ಅವರ 2ನೇ ಪುಣ್ಯ ಸ್ಮರಣೆಯ ದಿನವಾದ ಜ.2ರಂದು ವಿಜಯಪುರದಲ್ಲಿ ವಿಧ್ಯುಕ್ತವಾಗಿ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪಾರಂಪರಿಕ ತಾಣ ಫಲಕವನ್ನು ಅನಾವರಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಸಮಯೋಚಿತವಾಗಿದೆ. ಈ ಕಾರ್ಯಕ್ಕೆ ಕಾರ್ಯ ಭೂತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಹಾಗೂ ಮಂತ್ರಿ ಮಂಡಲದ ಸದಸ್ಯರು ಹಾಗೂ ಜಿಲ್ಲೆಯ ಉಸ್ತುವಾರಿ ಸಚಿವರಾದ ಎಂ. ಬಿ.ಪಾಟೀಲ ಅವರಿಗೆ ಜಿಲ್ಲೆಯ ಮಹಾಜನತೆಯ ಪರವಾಗಿ ಧನ್ಯವಾದಗಳು ತಿಳಿಸಿದ್ದಾರೆ. 

ಪ.ಪಂ ಸದಸ್ಯರಾದ ಡಾ. ಗುರುರಾಜ ಗಡೇದ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.