ದೇಶವನ್ನು ನಿರುದ್ಯೋಗಿಗಳ ಕೊಂಪೆ ಮಾಡಿದ ಮೋದಿ: ರಾಹುಲ್ ವಾಗ್ದಾಳಿ

ನವದೆಹಲಿ, ಜನವರಿ, 8 ಕೇಂದ್ರ ಸರ್ಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಯ ವಿರುದ್ಧ ದೇಶಾದ್ಯಂತ ವಿವಿಧ ಕಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಬಂದ್ ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನರೇಂದ್ರ ಮೋದಿ- ಅಮಿತ್ ಷಾ ಸರ್ಕಾರ ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆ ತಲೆದೋರಿದೆ ಎಂದು ಅವರು ದೂರಿದ್ದಾರೆ. ನರೇಂದ್ರ ಮೋದಿಯವರು ತಮ್ಮ ಬಾಲಬುಡುಕರಿಗೆ,ಬೇಕಾದ ಕೆಲವೇ ಕೆಲವು ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ದೇಶದ ಸಾರ್ವಜನಿಕ ವಲಯದ ಉದ್ಯಮಗಳನ್ನು ವಿನಾಶದ ಅಂಚಿಗೆ ನೂಕುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು. ಇಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾ ದ್ಯೋತಕವಾಗಿ ಭಾರತ್ ಬಂದ್ ನಡೆಸುತ್ತಿರುವ 25 ಕೋಟಿ ಕಾರ್ಮಿಕರಿಗೆ ಸೆಲ್ಯೂಟ್ ಎಂದು ರಾಹುಲ್ ಗಾಂಧಿ ಪೋಸ್ಟ್ ಹಾಕಿದ್ದಾರೆ. ಕೇಂದ್ರ ಸರ್ಕಾರದ ಜನವಿರೋಧಿ, ಕಾರ್ಮಿಕ ನೀತಿಗೆ ವಿರೋಧ ವ್ಯಕ್ತಪಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶಾದ್ಯಂತ ಸುಮಾರು 10 ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ ನಡೆಸುತ್ತಿವೆ .