ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ  National Forest Martyrs' Day

ಗದಗ, ಸೆ. 11: ದೇಶದ ಗಡಿಯನ್ನು ಕಾಯುವ ಸೈನಿಕರಂತೆ, ನಾಡಿನ ಪ್ರಾಕೃತಿಕ ಸಂಪತ್ತನ್ನು ಸಂರಕ್ಷಿಸುವ ಗುರುತರ ಜವಾಬ್ದಾರಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ವಹಿಸುತ್ತಿದ್ದಾರೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್‌. ಶಿವನಗೌಡ್ರ ಹೇಳಿದರು.  

ಗದಗ ತಾಲ್ಲೂಕಿನ ಬಿಂಕದಕಟ್ಟಿಯ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಸೆ. 11ರಂದು ನಾಡಿನ ಅರಣ್ಯ ಸಂಪತ್ತನ್ನು ರಕ್ಷಿಸುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಕರ್ನಾಟಕ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುವ ಅಂಗವಾಗಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.  

1980ರ ಅರಣ್ಯ ಸಂರಕ್ಷಣಾ ಕಾಯ್ದೆಗೆ ನೈಜ ಬಲ ದೊರೆತದ್ದು ಸುಪ್ರೀಂ ಕೋರ್ಟ್ನ ‘ಟಿ.ಎನ್‌. ಗೋದಾವರ್ಮನ್ ವಿರುದ್ಧ ಯೂನಿಯನ್ ಆಫ್ ಇಂಡಿಯಾ’ ಪ್ರಕರಣದ ಪ್ರಮುಖ ತೀರ​‍್ಿನ ನಂತರ. ಈ ತೀಪು ಅರಣ್ಯ ಸಂರಕ್ಷಣೆಗೆ ಹಾಗೂ ಅರಣ್ಯ ಇಲಾಖೆಯ ಕಾರ್ಯಚಟುವಟಿಕೆಗಳಿಗೆ ಶಕ್ತಿಯುತ ಬೆಂಬಲ ನೀಡಿದೆ. ಕರ್ನಾಟಕ ಅರಣ್ಯ ಕಾಯ್ದೆಯ ಸೆಕ್ಷನ್ 62ರ ಅಡಿಯಲ್ಲಿ ಅರಣ್ಯ ಅಧಿಕಾರಿಗಳಿಗೆ ಪೊಲೀಸ್ ಅಧಿಕಾರಿಗಳಂತೆಯೇ ಅಧಿಕಾರ ಮತ್ತು ರಕ್ಷಣೆ ನೀಡಲಾಗಿದೆ ಎಂದು ತಿಳಿಸಿದರು.  

ಸರ್ಕಾರಿ ದಾಖಲೆಗಳಲ್ಲಿ ‘ಅರಣ್ಯ’ ಎಂದು ನಮೂದಾಗಿರುವ ಯಾವುದೇ ಜಾಗವನ್ನು ಕೇಂದ್ರ ಸರ್ಕಾರದ ಅನುಮತಿಯಿಲ್ಲದೆ ಅನ್ಯ ಉದ್ದೇಶಕ್ಕೆ ಬಳಸಲು ಸಾಧ್ಯವಿಲ್ಲ. ಅರಣ್ಯ ರಕ್ಷಣೆ ಹಾಗೂ ಕಳ್ಳಸಾಗಣೆ ತಡೆಯುವಂತಹ ಅಪಾಯಕಾರಿ ಸಂದರ್ಭಗಳಲ್ಲಿ ಪ್ರಾಣತ್ಯಾಗ ಮಾಡಿದ ಹುತಾತ್ಮರ ಕುಟುಂಬಗಳಿಗೆ ಸೂಕ್ತ ಪರಿಹಾರ, ಬೆಂಬಲ ಹಾಗೂ ಪುನರ್ವಸತಿ ಕಲ್ಪಿಸುವುದು ಮತ್ತು ಅವರೊಂದಿಗೆ ನಾವಿದ್ದೇವೆ ಎಂಬ ಭರವಸೆ ನೀಡುವುದು ಅರಣ್ಯ ಹುತಾತ್ಮರ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.