ಮಮದಾಪುರದಲ್ಲಿ ನೂತನ ಗ್ರಾಮೀಣ ಆರೋಗ್ಯ ಕೇಂದ್ರ ಉದ್ಘಾಟನೆ: 276 ಜನರಿಗೆ ಉಚಿತ ಆರೋಗ್ಯ ತಪಾಸಣೆ

ಮಮದಾಪುರದಲ್ಲಿ ನೂತನ ಗ್ರಾಮೀಣ ಆರೋಗ್ಯ ಕೇಂದ್ರ ಉದ್ಘಾಟನೆ: 276 ಜನರಿಗೆ ಉಚಿತ ಆರೋಗ್ಯ ತಪಾಸಣೆ  New Rural Health Centre inaugurated in Mamadapur: Free health check-up for 276 people

ವಿಜಯಪುರ 28: ದಿವಂಗತ  ಬಿ.ಎಂ. ಪಾಟೀಲ ಅವರ ಪುಣ್ಯಸ್ಮರಣೆಯ ಅಂಗವಾಗಿ ಬಸವನ ಬಾಗೇವಾಡಿ ತಾಲೂಕಿನ ಮಮದಾಪುರದಲ್ಲಿ ಬಿ.ಎಲ್‌.ಡಿ.ಇ ಡೀಮ್ಡ್‌ ವಿಶ್ವವಿದ್ಯಾಲಯದ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ನೂತನ ಗ್ರಾಮೀಣ ಆರೋಗ್ಯ ಕೇಂದ್ರದ ಉದ್ಘಾಟನೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.  

ಮಮದಾಪುರ ವಿರಕ್ತಮಠದ ಅಭಿನವ ಮುರುಘೇಂದ್ರ ಮಹಾಸ್ವಾಮಿಗಳು ನೂತನ ಗ್ರಾಮೀಣ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ತೇಜಸ್ವಿನಿ ವಲ್ಲಭ, ಗ್ರಾಮೀಣ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಅವರ ಸಮೀಪದಲ್ಲೇ ಒದಗಿಸುವ ಉದ್ದೇಶದಿಂದ ಈ ಆರೋಗ್ಯ ಕೇಂದ್ರ ಆರಂಭಿಸಲಾಗಿದೆ ಎಂದು ಹೇಳಿದರು.  

ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್‌.ಡಿ.ಇ ಸಂಸ್ಥೆ ಸದಾ ಬದ್ಧವಾಗಿದೆ. ಜನರ ಆರೋಗ್ಯ ರಕ್ಷಣೆಗೆ ಅಗತ್ಯವಾದ ವೈದ್ಯಕೀಯ ಸೇವೆಗಳನ್ನು ತಲುಪಿಸುವುದು ಸಂಸ್ಥೆಯ ಪ್ರಮುಖ ಗುರಿಯಾಗಿದೆ ಎಂದು ಅವರು ತಿಳಿಸಿದರು.  

ಇದೇ ಸಂದರ್ಭದಲ್ಲಿ ಗಣ್ಯರು ದಿವಂಗತ ಬಿ.ಎಂ. ಪಾಟೀಲ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.  ಕಾರ್ಯಕ್ರಮದಲ್ಲಿ ಡೀಮ್ಡ್‌ ವಿಶ್ವವಿದ್ಯಾಲಯದ ಕುಲಾಧಿಪತಿ ಬಿ.ಎಂ. ಪಾಟೀಲ, ಕುಲಪತಿ ಡಾ. ಅರುಣ ಚಂ. ಇನಾಮದಾರ, ಹಿರಿಯ ಉಪಕುಲಪತಿ ಡಾ. ವಿಜಯಕುಮಾರ ಟಿ. ಕಲ್ಯಾಣಪ್ಪಗೋಳ, ಉಪವೈದ್ಯಕೀಯ ಅಧೀಕ್ಷಕ ಡಾ. ರವಿಕುಮಾರ ಬಿರಾದಾರ ಸೇರಿದಂತೆ ವೈದ್ಯಕೀಯ ಕ್ಷೇತ್ರದ ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.  

ನಂತರ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬೆಳಗ್ಗೆ 10ರಿಂದ ಸಂಜೆ 4.30ರವರೆಗೆ ತಜ್ಞ ವೈದ್ಯರು ವಿವಿಧ ಕಾಯಿಲೆಗಳ ತಪಾಸಣೆ ನಡೆಸಿ, ಅಗತ್ಯ ಸಲಹೆ ಹಾಗೂ ಓಷಧಿಗಳನ್ನು ವಿತರಿಸಿದರು. ಶಿಬಿರದಲ್ಲಿ ಒಟ್ಟು 276 ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದು, ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ 40 ಜನರನ್ನು ವಿಜಯಪುರ ನಗರದ ಬಿ.ಎಲ್‌.ಡಿ.ಇ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಲಾಗಿದೆ.