ಬೆಂಗಳೂರು, ಸೆ 18 ಜಾರಿ ನಿರ್ದೇಶನಾಲಯದ ವಿಚಾರಣೆಗೆ ಗುರುವಾರ ಹಾಜರಾಗುವುದಾಗಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೆ ಹಾಜರಾಗುವಂತೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ನೊಟೀಸ್ ಜಾರಿಯಾಗಿದ್ದು, ಈ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಇಡಿಯಿದ ನೋಟಿಸ್ ಬಂದಿದೆ. ಸೆ 14ರಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ನಾಳೆ ವಿಚಾರಣೆಗೆ ಹಾಜರಾಗಲು ದೆಹಲಿಗೆ ತೆರಳುತ್ತಿರುವುದಾಗಿ ಹೇಳಿದರು.
ಒಂದು ಸಾಲಿನ ಬರಹದಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ನೊಟೀಸ್ ನಲ್ಲಿ ವಿಚಾರಣೆಗೆ ಸಂಬಂಧಿಸಿದಂತೆ ಯಾವುದೇ ಕಾರಣ ನೀಡಿಲ್ಲ, ತಾವು ಸೇರಿದಂತೆ ಒಟ್ಟು 184 ಮಂದಿಗೆ ನೊಟೀಸ್ ನೀಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಡಿ.ಕೆ ಶಿವಕುಮಾರ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಟೀಸ್ ನೀಡಿದ್ದಾರೆಯೋ ಎಂಬುದನ್ನು ನೊಟೀಸ್ ನಲ್ಲಿ ನಮೂದಿಸಿಲ್ಲ. ಶಿವಕುಮಾರ್ ಹಾಗೂ ತಮ್ಮ ನಡುವೆ ಯಾವುದೇ ಹಣಕಾಸಿನ ವ್ಯವಹಾರ ಇಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.